ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
ಶ್ರೀನಿವಾಸಪುರದ ತಾಲ್ಲೂಕು ಕಚೇರಿ ಎದುರು ತಾಲ್ಲೂಕು ಎಸ್ಎಫ್ಐ ಕಾರ್ಯಕರ್ತರು, ಪುತ್ತೂರಿನ ವಿದ್ಯಾರ್ಥಿನಿ ಮೇಲೆ ಈಚೆಗೆ ನಡೆದ ಸಾಮೂಹಿ ಅತ್ಯಾಚಾರ ಘಟನೆಯನ್ನು ಖಂಡಿಸಿ ಶನಿವಾರ ತಹಶೀಲ್ದಾರ್ ಬಿ.ಎಸ್.ರಾಜೀವ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಕಚೇರಿ ಎದುರು ತಾಲ್ಲೂಕು ಎಸ್ಎಫ್ಐ ಕಾರ್ಯಕರ್ತರು ಪುತ್ತೂರಿನ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದ ಸಾಮೂಹಿ ಅತ್ಯಾಚಾರ ಹಾಗೂ ಅಮಲು ಪದಾರ್ಥ ಸಾಗಾಟ ತಡೆಗಟ್ಟುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಜಿಲ್ಲಾ ಎಸ್ಎಫ್ಐ ಸಹ ಕಾರ್ಯದರ್ಶಿ ಶ್ರೀಕಾಂತ್ ಪ್ರತಿಭಟನೆ ನಿರತ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಅಮಲು ಪದಾರ್ಥ ಸೇವಿಸಿದ ಗೂಂಡಾಗಳಿಂದ ಇಂಥ ಹೇಯ ಕೃತ್ಯ ನಡೆದಿದೆ. ದೇರಲ ಕಟ್ಟೆಯಲ್ಲಿ ನಡೆದ ಕೊಲೆ ಪ್ರಯತ್ನ ನಡೆಸಿದ ವ್ಯಕ್ತಿಯೂ ಅಮಲು ಪದಾರ್ಥ ಸೇವನೆ ಮಾಡಿದ್ದ ವಿಷಯ ಬೆಳಕಿಗೆ ಬಂದಿದೆ. ಅಮಲು ಪದಾರ್ಥ ಸೇವಿಸಿ ಸರಣಿ ದುಷ್ಕೃತ್ಯಗಳನ್ನು ನನಡೆಸಲಾಗುತ್ತಿದೆ ಎಂದು ಹೇಳಿದರು.
ಅಮಲು ಪದಾರ್ಥ ಸೇವಿಸಿದ್ದ ಎಬಿವಿಪಿ ಕಾರ್ಯಕರ್ತರು ಇಂಘ ಕೃತ್ಯ ಎಸಗಿರುವುದು ನಾಚಿಕೆ ಕೇಡಿನ ಸಂಗತಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂಥ ಹೇಯ ಕೃತ್ಯಗಳು ನಡೆಯುತ್ತಿದ್ದರೂ, ಸರ್ಕಾರ ತಡೆಯಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಜನಪ್ರತಿನಿಧಿಗಳು ರಾಜಕೀಯ ಬಿಟ್ಟರೆ ಬೇರೆನನ್ನೂ ಮಾಡುತ್ತಿಲ್ಲ. ಅಲ್ಲಿ ನಡೆಯುತ್ತಿರುವ ದುಷ್ಕೃತ್ಯಗನ್ನು ತಡೆಯಲು ಪ್ರಯತ್ನಿಸುತ್ತಿಲ್ಲ ಎಂದು ಆರೋಪಿಸಿದರು.
ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯದೆ, ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಆರೋಪಿಗಳನ್ನು ಬಂಧಿಸಿ ಶಿಕ್ಷೆ ಕೊಡಿಸಬೇಕು. ಆ ಮೂಲಕ ಸಂತ್ರಸ್ತ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಬೇಕು. ಅಮಲು ಪದಾರ್ಥಗಳ ಸಾಗಾಣಿಕೆಯನ್ನು ವ್ಯವಸ್ಥಿತವಾಗಿ ತಡೆಗಟ್ಟಬೇಕು ಎಂದು ಹೇಳಿದರು.
ಸರ್ಕಾರ ಕೊಥಾರಿ ಆಯೋಗದ ನಿರ್ದೇಶದಂತೆ ಹೆಣ್ಣು ಮಕ್ಕಳು ವ್ಯಾಸಂಗ ಮಾಡುವ ಶಾಲಾ ಕಾಲೇಜುಗಳ್ಳಿ ಲೈಂಗಿಕ ದೌರ್ಜನ್ಯ ವಿರೋಧಿ ಸಮಿತಿಗಳನ್ನು ರಚಿಸಬೇಕು. ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಮಹಿಳೆಯರು ಹಾಗೂ ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ತಡೆಯಲು ಸಮರ್ಥವಾದ ಕಾನೂನು ಜಾರಿ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ತಹಶೀಲ್ದಾರ್ ಬಿ.ಎಸ್.ರಾಜೀವ್ ಅವರಿಗೆ ನೀಡಲಾಯಿತು.
ಮೆರವಣಿಗೆ: ಪಟ್ಟಣದ ಶಾಲಾ ಕಾಲೇಜು ವಿದ್ಯಾರ್ಥಿಗಳು ಬಾಲಕಿ ಮೇಲೆ ಅತ್ಯಾಚಾರ ಘಟನೆಯನ್ನು ಖಂಡಿಸಿ ಮುಖ್ಯ ರಸ್ತೆಗಳಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಿದರು.