ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
ಶ್ರೀನಿವಾಸಪುರ: ಕಟ್ಟಡ ಕಾರ್ಮಿಕರ ಸರ್ಕಾರದ ಸೌಲಭ್ಯ ಪಡೆಯಲು ಸಾಂಘಿಕ ಪ್ರಯತ್ನ ಅಗತ್ಯ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್ ಹೇಳಿದರು.
ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಿಸಿ ಮಾತನಾಡಿ, ಕಟ್ಟಡ ಕಾರ್ಮಿಕರು ಸರ್ಕಾರದ ಸೌಲಭ್ಯ ಪಡೆಯಲು ಕಾರ್ಮಿಕ ಇಲಾಖೆಯಲ್ಲಿ ತಪ್ಪದೆ ನೋಂದಣಿ ಮಾಡಿಸಬೇಕು. ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡು, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ಹೇಳಿದರು. ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಯಲ್ಲಪ್ಪ ಮಾತನಾಡಿ, ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಓದುವ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕಾರ್ಮಿಕ ಇಲಾಖೆ ವತಿಯಿಂದ ಲ್ಯಾಪ್ಟ್ಯಾಪ್ ಕೊಡಲಾಗುವುದು. ಶೈಕ್ಷಣಿಕ ಹಂತ ಹಾಗೂ ಕೋರ್ಸ್ ಅನುಸರಿಸಿ ರೂ.3 ಸಾವಿರದಿಂದ 30 ಸಾವಿರದ ವರೆಗೆ ಶಿಷ್ಯವೇತನ ನೀಡಲಾಗುವುದು. ಅರ್ಹ ಕಾರ್ಮಿಕರು ಈ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು. ಮುಖ್ಯ ಶಿಕ್ಷಕ ಎ.ವೆಂಕಟರೆಡ್ಡಿ, ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಚಂದ್ರಪ್ಪ ಕಟ್ಟಡ ಕಾರ್ಮಿಕರ ಸಮಸ್ಯೆ ಕುರಿತು ಮಾತನಾಡಿದರು. ಮುಖಂಡರಾದ ಕೃಷ್ಣಪ್ಪ, ವೆಂಕಟರಾಮರೆಡ್ಡಿ ಇದ್ದರು.