ಅಧಿಕಾರಿಗಳು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಸಮಸ್ಯೆ ತಲೆದೋರಬಾರದು ಅಭಿವ್ರದ್ದಿ ಕಾಮಗಾರಿಗಳು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು :ಎಂ.ಆರ್‌.ರವಿಕುಮಾರ್‌

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಶ್ರೀನಿವಾಸಪುರ : ಅಧಿಕಾರಿಗಳು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸಬೇಕು. ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್‌.ರವಿಕುಮಾರ್‌ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ 15ನೇ ಹಣಕಾಸು ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ತಾಲ್ಲೂಕು ನರೇಗಾ ಯೋಜನೆ ಅನುಷ್ಠಾನದಲ್ಲಿ ಪ್ರಥಮ ಸ್ಥಾನದಲ್ಲಿದೆ. ಕೋಲಾರ ಜಿಲ್ಲೆ, ರಾಜ್ಯದಲ್ಲಿ 15ನೇ ಸ್ಥಾನದಲ್ಲಿತ್ತು. ಆದರೆ ಈಗ 12ನೇ ಸ್ಥಾನಕ್ಕೆ ಬಂದಿದೆ. ಜಿಲ್ಲೆಯನ್ನು 5ನೇ ಸ್ಥಾನಕ್ಕೆ ತರುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಕೊರೊನಾ ಸಂಕಷ್ಟದ ನಡುವೆ ಶೈಕ್ಷಣಿಕ ಚಟುವಟಿಕೆ ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ. ಕೇಂದ್ರ ಸರ್ಕಾರ ಶಾಲೆ ತೆರೆಯಲು ಅನುಮತಿ ನೀಡಿಲ್ಲ. ವಿದ್ಯಾಗಮ ಯೋಜನೆ ನಿಲ್ಲಿಸಲಾಗಿದೆ. ಆದರೆ ಚಂದನ ವಾಹಿನಿಯಲ್ಲಿ ಬರುತ್ತಿರುವ ಶೈಕ್ಷಣಿಕ ಕಾರ್ಯಕ್ರಮಗಳನ್ನು ವೀಕ್ಷಿಸಲು ಅನುಕೂಲವಾಗುವಂತೆ ಪ್ರತಿ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ಚಂದನ ವಾಹಿನಿ ಪ್ರಸಾರ ಮಾಡುವ ಕಾರ್ಯಕ್ರಮಗಳನ್ನು ವೀಕ್ಷಿಸಲು ಕೊಠಡಿ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೆ.ಪಿ.ಸಂಜೀವಪ್ಪ, ಯೋಜನಾ ನಿರ್ದೇಶಕ ಮುನಿಕೃಷ್ಣಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್‌.ಆನಂದ್‌, ಸಹಾಯಕ ನಿರ್ದೇಶಕ ರಾಮಪ್ಪ, ಸುರೇಶ್‌ ಇದ್ದರು.