ಅಧಿಕಾರಿಗಳು ಸ್ಥಳ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ ಸಿ.ಸತ್ಯಭಾಮ.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

 

 

 

ಅಧಿಕಾರಿಗಳು ಸ್ಥಳ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ ಸಿ.ಸತ್ಯಭಾಮ.

 

 

 

ಕೋಲಾರ ; ಕೋಲಾರ ಜಿಲ್ಲೆಯನ್ನು ಬರ ಪೀಡಿತ ಜಿಲ್ಲೆಯೆಂದು ಸರ್ಕಾರವು ಘೋಷಿಸಿದ್ದು, ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ನೇಮಿಸಿರುವ ಹೋಬಳಿವಾರು ನೋಡಲ್ ಅಧಿಕಾರಿಗಳು ಹಾಗೂ ಕುಡಿಯುವ ನೀರಿಗೆ ಸಂಬಂಧಿಸಿದ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಇದ್ದರೆ ತುರ್ತಾಗಿ ಪರಿಹರಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಸಿ. ಸತ್ಯಭಾಮ ಅವರು ತಿಳಿಸಿದರು.

ಇಂದು ತಮ್ಮ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬರ ಪರಿಸ್ಥಿತಿ ನಿರ್ವಹಣೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಖಾಸಗಿ ಟ್ಯಾಂಕರ್ ಮೂಲಕ ಕೆಲವು ಕಡೆ ನೀರು ಸರಬರಾಜು ಮಾಡುತ್ತಿದ್ದು, ಇಲ್ಲಿ ಖಾಸಗಿ ಕೊಳವೆ ಬಾವಿಗಳನ್ನು ಗುರ್ತಿಸಿ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡಲು ವ್ಯವಸ್ಥೆ ಮಾಡಿಕೊಳ್ಳುವ ಮೂಲಕ ಟ್ಯಾಂಕರ್‍ಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ನೀರಿನ ಅಭಾವ ಉಂಟಾದರೆ ಟ್ಯಾಂಕರ್‍ಗಳ ಮೂಲಕ ತಾತ್ಕಾಲಿಕವಾಗಿ ನೀರು ಸರಬರಾಜು ಮಾಡಿ ಎಂದ ಅವರು, ಕರೋನಾ ಸಂಬಂಧ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿಯನ್ನು ರಚಿಸಿದ್ದು, ಹೊರ ರಾಜ್ಯಗಳಿಂದ ಜನರು ಜಿಲ್ಲೆಗೆ ಅಕ್ರಮವಾಗಿ ಪ್ರವೇಶ ಮಾಡದಂತೆ ನೋಡಿಕೊಳ್ಳಲಾಗುತ್ತಿದೆ ಎಂದರು.

ಅಪರ ಜಿಲ್ಲಾಧಿಕಾರಿಗಳಾದ ಶಿವಸ್ವಾಮಿ ಅವರು ಮಾತನಾಡಿ ಕೋವಿಡ್ ಪಾಸಿಟಿವ್ ಬಂದಿರುವ ವ್ಯಕ್ತಿಗಳ ಸಂಪರ್ಕಿತರನ್ನು ಹೋಂ ಕ್ವಾರಂಟೈನ್ ಮಾಡಲಾಗುತ್ತಿದ್ದು, ಹೋಂ ಕ್ವಾರಂಟೈನ್‍ಗಳ ಪಟ್ಟಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ನೀಡಲಾಗುವುದು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಹೋಂ ಕ್ವಾರಂಟೈನ್ ಮನೆಗಳಿಗೆ ದಿನಕ್ಕೆ ಕನಿಷ್ಠ 2 ಬಾರಿ ಭೇಟಿ ನೀಡಿ ಹೋಂ ಕ್ವಾರಂಟೈನ್ ನಿಯಮಗಳು ಶಿಸ್ತಾಗಿ ಪಾಲನೆ ಆಗುವಂತೆ ನೋಡಿಕೊಳ್ಳಬೇಕು. ಅಲ್ಲದೆ ಆ್ಯಪ್ ಮೂಲಕ ಪ್ರತಿದಿನ ಮಾಹಿತಿಯನ್ನು ಅಪ್‍ಲೋಡ್ ಮಾಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಹೆಚ್.ವಿ. ದರ್ಶನ್, ಸೇರಿದಂತೆ ಹೋಬಳಿವಾರು ನೋಡಲ್ ಅಧಿಕಾರಿಗಳು, ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಅಭಿಯಂತರರು ಉಪಸ್ಥಿತರಿದ್ದರು.