ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಗರ್ಭಿಣಿಯರು ಮಗುವಿನ ಆರೋಗ್ಯದ ದೃಷ್ಟಿಯಿಂದ ಪೌಷ್ಠಿಕ ಆಹಾರ ಸೇವನೆ ಮಾಡಬೇಕು ಹಾಗೂ ಕಾಲ ಕಾಲಕ್ಕೆ ಸರಿಯಾಗಿ ಸೂಚಿತ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಾಲ್ಲೂಕು ಮಕ್ಕಳ ಅಭಿವೃದ್ಧಿ ಯೋಜನೆಯ ಅಧಿಕಾರಿ ಸಿ.ರೊಸಲಿನ್ ಸತ್ಯ ಹೇಳಿದರು.
ತಾಲ್ಲೂಕಿನ ಕಲ್ಲೂರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಐಸಿಡಿಎಸ್‌ನಿಂದ ಸೋಮವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಸ್ವಸ್ಥ ಸಮಾಜ ನಿರ್ಮಾಣ ಕಾರ್ಯದಲ್ಲಿ ಮಹಿಳೆಯರ ಪಾತ್ರ ಹಿರಿದು. ಆರೋಗ್ಯವಂತ ಮಕ್ಕಳು ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಪೂರಕ. ಆದ್ದರಿಂದ ಗರ್ಭಿಣಿಯರು ಹಾಗೂ ಬಾಣಂತಿಯರು ತಮ್ಮ ಹಾಗೂ ಮಕ್ಕಳ ಆರೋಗ್ಯಕ್ಕೆ ಹೆಚ್ಚಿನ ಗಮನ ನೀಡಬೇಕು ಎಂದು ಹೇಳಿದರು. ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬೈರಾರೆಡ್ಡಿ ಮಾತನಾಡಿ, ಗರ್ಭಿಣಿಯರು ಸೊಪ್ಪು, ತರಕಾರಿಗಳನ್ನು ಹೆಚ್ಚಾಗಿ ಸೇವಿಸಬೇಕು. ಹಾಲು, ಹಣ್ಣಿನ ಸೇವನೆಯಿಂದ ಆರೋಗ್ಯ ವೃದ್ಧಿಗೊಳ್ಳುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗರ್ಭಿಣಿಯರಿಗೆ ಸೀಮಂತ ಹಾಗೂ ಮಕ್ಕಳಿಗೆ ಅನ್ನಪ್ರಾಶನ ಮಾಡಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟರೆಡ್ಡಿ, ಸದಸ್ಯೆಯರಾದ ರಾಜಲಕ್ಷ್ಮಿ, ನಾಗರತ್ನಮ್ಮ, ಸಹಾಯಕ ಸಿಡಿಪಿಒ ನಾನಮ್ಮ, ಮೇಲ್ವಿಚಾರಕಿ ಶಾರದಮ್ಮ ಇದ್ದರು.