ವರದಿ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ
ಫೆಬ್ರವರಿ 15 ಕ್ಕೆ ನೂರು ಹಾಸಿಗೆಗಳ ನೂತನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಲೋಕಾರ್ಪಣೆ – ಜೆ.ಮಂಜುನಾಥ್
ಕೋಲಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಫೆಬ್ರವರಿ 15 ಕ್ಕೆ ಜಿಲ್ಲಾ ಎಸ್.ಎನ್.ಆರ್ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ ನೂರು ಹಾಸಿಗೆಗಳ ನೂತನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡದ ಉದ್ಘಾಟನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಸಚಿವರಾದ ಬಿ.ಶ್ರೀರಾಮುಲು ಅವರು ನೆರವೇರಿಸುವರೆಂದು ಜಿಲ್ಲಾಧಿಕಾರಿಗಳಾದ ಜೆ.ಮಂಜುನಾಥ್ ಅವರು ತಿಳಿಸಿದರು.
ಇಂದು ತಮ್ಮ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಆಸ್ಪತ್ರೆ ಉದ್ಘಾಟನೆ ಕುರಿತು ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳು ಕೈಗೊಂಡಿರುವ ಪೂರ್ವಸಿದ್ದತೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.
17 ಕೋಟಿ 50 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಾಣವಾಗಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ, 200 ಲಕ್ಷ ರೂ.ಗಳ ವೆಚ್ಚದಲ್ಲಿ ಕೋಲಾರದ ದರ್ಗಾ ಮೊಹಲ್ಲಾದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರ, 200 ಲಕ್ಷ ರೂಗಳ ವೆಚ್ಚದಲ್ಲಿ ಮೇಮಗಲ್‍ನ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಮಾಲೂರು ತಾಲ್ಲೂಕಿನ ಚಿಕ್ಕತಿರುಪತಿಯಲ್ಲಿ 30 ಲಕ್ಷ ರೂ.ಗಳ ವೆಚ್ಚದಲ್ಲಿ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಕಟ್ಟಡವನ್ನು ನಿರ್ಮಿಸಲಾಗಿದ್ದು ಈ ಕಟ್ಟಡಗಳನ್ನು ಅಂದು ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ವಿಜಯ್‍ಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಾರಾಯಣಸ್ವಾಮಿ. ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಚಂದನ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಜಗದೀಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಾರಣಿ, ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ನಾರಾಯಣಸ್ವಾಮಿ ಅವರು ಉಪಸ್ಥಿತರಿದ್ದರು.