ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಪೂರೈಕೆ ಹಾಗೂ ಸ್ವಚ್ಛತೆ ಪಾಲನೆಗೆ ಮೊದಲ ಆದ್ಯತೆ ನೀಡಲಾಗುವುದು.:ಕೆ.ಎಂ.ನರೇಶ್
ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಪೂರೈಕೆ ಹಾಗೂ ಸ್ವಚ್ಛತೆ ಪಾಲನೆಗೆ ಮೊದಲ ಆದ್ಯತೆ ನೀಡಲಾಗುವುದು. ಕೊರೊನಾ ಸಂಕಷ್ಟದ ಸಮಯದಲ್ಲಿ ಸೋಂಕು ಹರಡದಂತೆ ಜನರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಎಂ.ನರೇಶ್ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸರ್ವಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, 2020–21ನೇ ಹಣಕಾಸು ಯೋಜನೆಯಲ್ಲಿ ಕುಡಿಯುವ ನೀರು ಸರಬರಾಜು, ಸ್ವಚ್ಛತೆ ಮತ್ತಿತರ ವಿಷಗಳಿಗೆ ಸಂಬಂಧಿಸಿದಂತೆ ರೂ.1.43 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಅನುಮೋದನೆ ಪಡೆಯಲಾಗಿದೆ ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ಮಾತನಾಡಿ, ತಾಲ್ಲೂಕು ಪಂಚಾಯಿತಿ ವ್ಯಾಪ್ತಿಗೆ ಬರುವ ವಿವಿಧ ಇಲಾಖೆಗಳ ಅಧಿಕಾರಿಗಳು, ತಮ್ಮ ವ್ಯಾಪ್ತಿಯಲ್ಲಿನ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಸಮಯದೊಳಗೆ ಮುಸಿಸಬೇಕು. ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಲಾಗದು. ಖುದ್ದು ಪರಿಶೀಲಿಸಿ ವರದಿ ನೀಡಬೇಕು ಎಂದು ಹೇಳಿದರು.
ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆ ಸವಾಲಿನ ವಿಷಯವಾಗಿದೆ. ಜನರು ಹಾಗೂ ಜಾನುವಾರು ಮಾತ್ರವಲ್ಲದೆ ಕಾಡಿನ ಜೀವಿಗಳೂ ಸಹ ನೀರಿಗಾಗಿ ಪರಿತಪಿಸುತ್ತಿವೆ. ಮೂಕ ಪ್ರಾಣಿಗಳ ದಾಹ ತೀರಿಸುವ ಕೆಲಸವೂ ಆಗಬೇಕು ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಉಪಾಧ್ಯಕ್ಷೆ ಬಾಲಾವತಿ, ವ್ಯವಸ್ಥಾಪಕ ಸುರೇಶ್ ಹಾಗೂ ಸದಸ್ಯರು ಇದ್ದರು.