ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
ಶ್ರೀನಿವಾಸಪುರ: ಪಟ್ಟಣದ ಕೃಷಿ ಇಲಾಖೆ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಥಮ ದರ್ಜೆ ಸಹಾಯಕರೊಬ್ಬರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದ ಕಾರ್ಯಕರ್ತರು ಗುರುವಾರ ಕೃಷಿ ಇಲಾಖೆ ಕಚೇರಿ ಎದುರು ಧರಣಿ ನಡೆಸಿದರು.
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ವೀರಭದ್ರಸ್ವಾಮಿ ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಿ, ಇಲ್ಲಿನ ಕೃಷಿ ಇಲಾಖೆ ಕಚೇರಿಯಲ್ಲಿ ಹತ್ತು ವರ್ಷಗಳಿಂದ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಯನ್ನು ಶಿಸ್ತು ಕ್ರಮವಾಗಿ ಕಾರವಾರದಿಂದ ಇಲ್ಲಿಗೆ ವರ್ಗಾವಣೆ ಮಾಡಲಾಗಿತ್ತು. ಆದರೆ ಅವರು ಇಲ್ಲೂ ಸಹ ಬೇರೆ ಇಲಾಖೆಗಳಿಗೆ ಬೇನಾಮಿ ಹೆಸರಲ್ಲಿ ಅರ್ಜಿ ಸಲ್ಲಿಸಿ ಹಣ ಪಡೆದುಕೊಂಡಿದ್ದಾರೆ ಎಂದು ಆಪಾದಿಸಿದರು. ಸಂಘದ ತಾಲ್ಲೂಕು ಘಟಕದ ಅದ್ಯಕ್ಷ ಶ್ರೀರಾಮರೆಡ್ಡಿ ಮಾತನಾಡಿ, ಕೃಷಿ ಇಲಾಖೆ ಅಧಿಕಾರಿಗಳು ಸರ್ಕಾರದ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಬೇಕು. ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು. ರೈತ ವಿರೋಧಿ ಸಿಬ್ಬಂದಿ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು. ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಧನಂಜಯ್ ಅವರಿಗೆ ನೀಡಿದರು. ಮುಖಂಡರಾದ ಬೈರಾರೆಡ್ಡಿ, ನಾರಾಯಣಸ್ವಾಮಿ, ಶ್ರೀಧರ್, ದೇವರಾಜು, ವೀರಪ್ಪರೆಡ್ಡಿ, ಅಶ್ರಫ್, ನರಸಿಣಹಮೂರ್ತಿ, ಅಸ್ಲಂಪಾಷ, ರಾಜಣ್ಣ, ಮುನಿರಾಜು ಇದ್ದರು.