ಸರ್ಕಾರದ ಸವಲತ್ತುಗಳು ಎಲ್ಲರಿಗೂ ತಲುಪುವಂತಾಗಲಿ – ಜಿ.ಎ. ಬಾವಾ
ಕೋಲಾರ : ಸರ್ಕಾರವು ಎಲ್ಲರಿಗೂ ಸಾಮಾಜಿಕ ನ್ಯಾಯ ಸಿಗಬೇಕೆಂಬ ಉದ್ದೇಶದಿಂದ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು ಇವುಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುವಂತಾಗಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾದ ಜಿ.ಎ ಬಾವಾ ತಿಳಿಸಿದರು.
ಇಂದು ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಅಲ್ಪಸಂಖ್ಯಾತ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಯಂ ಸೇವಾ ಸಂಸ್ಥೆಗಳು, ಸಾರ್ವಜನಿಕರು ಹಾಗೂ ಅಲ್ಪಸಂಖ್ಯಾತ ಪ್ರತಿನಿಧಿಗಳೊಂದಿಗೆ ಕುಂದುಕೊರತೆಗಳ ಸಭೆಯ ಅಧ್ಯಕ್ಷ
-ತೆಯನ್ನು ವಹಿಸಿ ಅವರು ಮಾತನಾಡಿದರು.
ಸರ್ಕಾರದ ಸವಲತ್ತುಗಳನ್ನು ಜೈನರು, ಮುಸ್ಲಿಮರು, ಕ್ರಿಶ್ಚಿಯನ್ನರು, ಬೌದ್ದರಿಗೆ ಸೂಕ್ತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಅಲ್ಪ ಸಂಖ್ಯಾತರ ಆಯೋಗವನ್ನು ರಚಿಸಲಾಗಿದೆ. ಈ ಆಯೋಗವನ್ನು ಯಾವುದೇ ರಾಜಕೀಯ ಪಕ್ಷ ಸ್ಥಾಪನೆ ಮಾಡಿರುವುದಿಲ್ಲ, ಯುಎನ್ಒ ಸಂಸ್ಥೆ ರಚಿಸಿದೆ. ಆದ್ದರಿಂದ ಇಲಾಖೆಯ ಅಧಿಕಾರಿಗಳು ಸಾಮಾಜಿಕ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.
ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವು ಕೆಲವೊಂದು ಕಾರಣಗಳಿಂದ ತಡವಾಗಿದ್ದು, 9 ಲಕ್ಷ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿವೇತನ ಪಡೆಯುತ್ತಿದ್ದಾರೆ. ಕಳೆದ ವರ್ಷ 14 ಲಕ್ಷ ಹಾಗೂ ಪ್ರಸಕ್ತ ವರ್ಷದಲ್ಲಿ 3 ಲಕ್ಷ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳು ಬಂದಿವೆ. ಈ ಅರ್ಜಿಗಳನ್ನು ಸಲ್ಲಿಸಲು ಇನ್ನೂ ಒಂದು ತಿಂಗಳು ಕಾಲಾವಕಾಶ ನೀಡಲಾಗಿದೆ ಎಂದು ತಿಳಿಸಿದರು.
ಜನಪ್ರತಿನಿಧಿಗಳ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸಿ ನಿರ್ದಿಷ್ಟವಾಗಿ ಯಾವುದೇ ರೀತಿಯ ಸವiಸ್ಯೆಗಳಿದ್ದರೆ ಲಿಖಿತ ರೂಪದಲ್ಲಿ ಸಲ್ಲಿಸಿದರೆ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ತಿಳಿಸಿದ ಅವರು, ಮಕ್ಕಳಿಗೆ ಶಿಕ್ಷಣವನ್ನು ನೀಡುವ ಮೂಲಕ ಉತ್ತಮ ಭವಿಷ್ಯ ರೂಪಿಸಬೇಕು. ಪೋಷಕರು ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಆಗ ಮಕ್ಕಳಿಗೆ ಯಾವುದೇ ಸಮಸ್ಯೆ ಬಂದರು ಎದುರಿಸಲು ಸಿದ್ದರಿರುತ್ತಾರೆ ಎಂದು ಕಿವಿಮಾತು ಹೇಳಿದರು.
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಕಾರ್ಯದರ್ಶಿಯಾದ ಅನೀಸ್ ಸಿರಾಜ್ ಅವರು ಮಾತನಾಡಿ, ಸಮಾಜದ ಅಭಿವೃದ್ದಿಗಾಗಿ ಆಯೋಗವು ಅನೇಕ ಯೋಜನೆಗಳನ್ನು ಕಾರ್ಯಗತಗೊಳಿಸಿದೆ. ಇದನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಸಮಾಜದಲ್ಲಿ ಮುಂದೆ ಬರಬೇಕು ಎಂದು ತಿಳಿಸಿದರು.
ಕೇಂದ್ರ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತಂದಿದೆ. ಇದನ್ನು ಸರ್ಕಾರ ಮತ್ತು ಖಾಸಗಿ ಸಹಬಾಗಿತ್ವದಲ್ಲಿ ನಡೆಸಲಾಗುತ್ತದೆ. ಈ ಯೋಜನೆಯಡಿ ಕರ್ನಾಟಕದ ಎಲ್ಲಾ ಆಸ್ಪತ್ರೆಗಳಲ್ಲಿ 5 ಲಕ್ಷದವರಿಗೆ ಉಚಿತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ಇನ್ನು ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಭಾಗ್ಯ ಲಕ್ಷೀ ಯೋಜನೆಯನ್ನು ಜಾರಿಗೊಳಿಸಲಾಗಿದ್ದು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದ ಅವರು, ಅಂಗನವಾಡಿ ಕೇಂದ್ರಗಳ ಕೊರತೆ ಅಥವಾ ಕಟ್ಟಡಗಳ ಸಮಸ್ಯೆ ಇದ್ದರೆ ನೂತನ ಅಂಗನವಾಡಿ ಕೇಂದ್ರಗಳನ್ನು ಸ್ಥಾಪಿಸಲು ವರದಿ ನೀಡಿ ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೆ.ರತ್ನಯ್ಯ ಅವರು ಮಾತನಾಡಿ, ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಹೆಸರು ತಪ್ಪಿದ್ದರೆ ಆನ್ಲೈನ್ನಲ್ಲಿ ಬ್ಯಾಂಕ್ ಖಾತೆ ಆಧಾರ್ ಕಾರ್ಡ್ನಲ್ಲಿರುವ ಹೆಸರಿಗೆ ಹೊಂದಾಣಿಕೆಯಾಗುತ್ತಿಲ್ಲ. ಆದ್ದರಿಂದ ವಿದ್ಯಾರ್ಥಿ ವೇತನ ವಿಳಂಬವಾಗುತ್ತಿದೆ. ಹಾಗಾಗಿ ಬ್ಯಾಂಕ್ ಖಾತೆಯ ಹೆಸರು ಹೊಂದಾಣಿಕೆಯಾದರೆ ವಿದ್ಯಾರ್ಥಿ ವೇತನ ಸಿಗುವಂತಾಗಲು ಸರ್ಕಾರವು ಕ್ರಮವಹಿಸಬೇಕು. ಅದರ ಜೊತೆಗೆ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರು ಹೆಚ್ಚಿನ ಶ್ರಮವಹಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಮೈಲಾರಪ್ಪ, ವಕ್ಫ್ ಮಂಡಳಿಯ ಅಧ್ಯಕ್ಷರಾದ ಹಿದಾಯಿತುಲ್ಲಾ ಷರೀಫ್, ವಕ್ಫ್ ಬೋರ್ಡ್ ಸಂಸ್ಥೆಯ ಅಕ್ಭರ್ ಷರೀಫ್, ಉಪಾಧ್ಯಕ್ಷರಾದ ಹಿನಾಯಿತ್ ಶಿಂಶು ಸೇರಿದಂತೆ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ