ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
ಶ್ರೀನಿವಾಸಪುರ: ಹತ್ರಾಸ್ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳಿಗೆ ಮರಣ ದಂಟನೆ ವಿಧಿಸಬೇಕು ಎಂದು ವಾಲ್ಮೀಕಿ ಸಮುದಾಯದ ಬ್ರಹ್ಮಾನಂದ ಸ್ವಾಮೀಜಿ ಹೇಳಿದರು.
ಪಟ್ಟಣದಲ್ಲಿ ತಾಲ್ಲೂಕು ವಾಲ್ಮೀಕಿ ನಾಯಕ ಸ್ವಾಭಿಮಾನಿ ಚಳುವಳಿ ಹಾಗೂ ವಾಲ್ಮೀಕಿ ನವ ಸಮಾಜ ಟ್ರಸ್ಟ್ ಸದಸ್ಯರು ಹತ್ರಾಸ್ ಘಟನೆ ಖಂಡಿಸಿ ಪ್ರತಿಭಟನಾ ಪ್ರದರ್ಶನ ನಡೆಸಿದ ಬಳಿಕ ತಾಲ್ಲೂಕು ಕಚೇರಿ ಎದುರು ಮಾತನಾಡಿದರು. ಸಂಘಟನೆ ಜಿಲ್ಲಾಧ್ಯಕ್ಷ ವಿ.ಹರೀಶ್ ನಾಯಕ್ ಮಾತನಾಡಿ, ಉತ್ತರ ಪ್ರದೇಶದಲ್ಲಿ ಪರಿಶಿಷ್ಟ ಸಮುದಾಯದ ಮಹಿಳೆಯರಿಗೆ ರಕ್ಷಣೆ ಇಲ್ಲವಾಗಿದೆ. ಸರ್ಕಾರ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ನೊಡಿಕೊಳ್ಳಬೇಕು. ಮಹಿಳೆಯರಿಗೆ ಅಗತ್ಯವಾದ ರಕ್ಷಣೆ ಒದಗಿಸಬೇಕು. ಇಂಥ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು. ಸಂಘಟನೆಯ ರಾಜ್ಯಾಧ್ಯಕ್ಷ ಚಳುವಳಿ ರಾಜಣ್ಣ ಮಾತನಾಡಿ, ಹತ್ರಾಸ್‌ನಲ್ಲಿ ಮನೀಷಾ ವಾಲ್ಮೀಕಿ ಎಂಬ ಹೆಣ್ಣು ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು. ಆದರೆ ಸರ್ಕಾರ ಈ ಘಟನೆಯನ್ನು ತಿರುಚಿ, ನಿರ್ಲಕ್ಷಿಸುತ್ತಿರುವುದು ಖಂಡನೀಯ. ಎಂದು ಹೇಳಿದರು. ಈ ಸಂದರ್ಭದಲ್ಲಿ ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಅವರಿಗೆ ಅರ್ಪಿಸಲಾಯಿತು. ಸಂಘಟನೆಯ ತಾಲ್ಲೂಕು ಅಧ್ಯಕ್ಷ ವೆಂಕಟರವಣ, ಮುಖಂಡರಾದ ವೇಣುಗೋಪಾಲ್, ಶಿವಾ ನಾಯಕ್, ನವೀನ್, ನಾರಾಯಣಸ್ವಾಮಿ ಇದ್ದರು.