ಕುಂದಾಪುರ, ಸೆ: ಮಂಗಳೂರು ವಿಶ್ವವಿದ್ಯಾಲಯದಲ್ಲಿನ ಕುಂದ ಕನ್ನಡ ಅಧ್ಯಯನ ಪೀಠ ಸ್ಥಾಪನೆಗಾಗಿ ಸರ್ಕಾರದಿಂದ ಮಂಗಳೂರು ವಿಶ್ವವಿದ್ಯಾಲಯಕ್ಕೆ 50 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ ಎಂದು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಜುಡಿತ್ ಮೆಂಡೊನ್ಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದ ಕನ್ನಡ ಅಧ್ಯಯನ ಪೀಠ ಸ್ಥಾಪನೆಗಾಗಿ ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಅವರು ಈ ಹಿಂದೆ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯ ಮಾಡಿದ್ದಲ್ಲದೆ, ಅಧ್ಯಯನ ಪೀಠದ ಕಾರ್ಯಚಟುವಟಿಕೆಗಳನ್ನು ನಡೆಸಲು ಅನುಕೂಲವಾಗುವಂತೆ 1 ಕೋಟಿ ರೂ. ಅನುದಾನ ನೀಡುವಂತೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು 50 ಲಕ್ಷ ರೂ. ಬಿಡುಗಡೆ ಮಾಡಲು ಆದೇಶಿಸಿದ್ದರು.
ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ತಾಂತ್ರಿಕ ಶಿಕ್ಷಣ ಮತ್ತು ಯೋಜನೆಯ ಉಪಕಾರ್ಯದರ್ಶಿ ಎನ್.ಕುಮಾರ ಅವರು ಸಹಿ ಮಾಡಿರುವ ಆದೇಶ ಪತ್ರದಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ಒಟ್ಟು 850 ಲಕ್ಷ ರೂ. ಬಿಡುಗಡೆಗೊಳಿಲಾಗಿದ್ದು, ಅದರಲ್ಲಿ 50 ಲಕ್ಷ ರೂ. ಗಳನ್ನು ಕುಂದ ಕನ್ನಡ ಅಧ್ಯಯನ ಪೀಠಕ್ಕೆ ಮೀಸಲಿರಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.