

ಕೋಲಾರ: 2026-27ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳು ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ ಇಂದು (ಏಪ್ರಿಲ್ 12) ಜಿಲ್ಲೆಯಲ್ಲಿ ನಡೆಯುತ್ತಿದೆ.
ಈ ಸಂಬಂಧ ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ನೀಡಿದ ನಿರ್ದೇಶನದಂತೆ, ಸೇವಾಸಿಂದು ಪೋರ್ಟಲ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿರುವ ಹಿನ್ನೆಲೆ, ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಆಯೋಜಿಸಲಾಗಿದೆ.
ಇಂದು ಬೆಳಗ್ಗೆ 11:00 ರಿಂದ ಮಧ್ಯಾಹ್ನ 1:00 ರವರೆಗೆ ನಡೆಯುವ ಈ ಪರೀಕ್ಷೆಯನ್ನು ಅಲ್ಪಸಂಖ್ಯಾತರ ನಿರ್ದೇಶನಾಲಯದ ಮೇಲುಸ್ತುವಾರಿಯಲ್ಲಿ ಜಿಲ್ಲೆಯ ವಿವಿಧ ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ.
ಕೋಲಾರ ಜಿಲ್ಲೆಯಲ್ಲಿ ಮುಖ್ಯವಾಗಿ ಮುಳಬಾಗಿಲು ತಾಲ್ಲೂಕಿನ ಬಾಳಸಂದ್ರದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಕೋಲಾರ ತಾಲ್ಲೂಕಿನ ಗಾಜಲದಿನ್ನೆಯಲ್ಲಿರುವ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.
ಪರೀಕ್ಷೆಯ ಸುಸೂತ್ರ ನಿರ್ವಹಣೆಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯನ್ನು ಜಿಲ್ಲಾ ನೋಡೆಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಿ, ಶಿಸ್ತುಬದ್ಧವಾಗಿ ಪರೀಕ್ಷೆ ನಡೆಯುವಂತೆ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.
ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಕೇಂದ್ರಗಳಿಗೆ ಹಾಜರಾಗುವಂತೆ ಸೂಚನೆ ನೀಡಲಾಗಿದ್ದು, ಪರೀಕ್ಷೆಯ ಪಾರದರ್ಶಕತೆ ಹಾಗೂ ಶಿಸ್ತಿಗೆ ವಿಶೇಷ ಆದ್ಯತೆ ನೀಡಲಾಗಿದೆ.
ಜಿಲ್ಲಾ ಆಡಳಿತ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪರೀಕ್ಷೆಯ ಯಶಸ್ವಿ ನಿರ್ವಹಣೆಗೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

