

ಕೋಲಾರ : ಜಿಲ್ಲೆಯಲ್ಲಿ ಮಾರ್ಚ್ 01 ರಿಂದ 20ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-1 ಸಿಸಿಟಿವಿ ಕ್ಯಾಮೆರಾ ಕಣ್ಣಾವಲಿನಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಸಿದ್ಧತೆಗಳ ಕುರಿತು ಮಾದ್ಯಮ ಘೋಷಿಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಯಾವುದೇ ಗೊಂದಲವಿಲ್ಲದಂತೆ ಪರೀಕ್ಷೆಗಳನ್ನು ಶಾಂತಿಯುತವಾಗಿ ನಡೆಸಲು ಜಿಲ್ಲಾಡಳಿತ ಅಗತ್ಯವಾದ ಸಿದ್ಧತೆಗಳನ್ನು ಮಾಡಿಕೊಂಡಿದೆ. ವಿದ್ಯಾರ್ಥಿಗಳು ಯಾವುದೇ ವದಂತಿಗಳಿಗೆ ಕಿವಿಗೊಡದೇ ಆತಂಕವಿಲ್ಲದೆ. ಪರೀಕ್ಷೆಯನ್ನು ಬರೆಯುವಂತೆ ತಿಳಿಸಿದರು.
ಕೋಲಾರ ಜಿಲ್ಲೆಯಲ್ಲಿ ಒಟ್ಟು 28 ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸಲಾಗಿದೆ. ಅದರಲ್ಲಿ ಕೋಲಾರ ತಾಲ್ಲೂಕಿನಲ್ಲಿ 10 ಮುಳಬಾಗಿಲು ತಾಲ್ಲೂಕಿನ 5, ಶ್ರೀನಿವಾಸಪುರ ತಾಲ್ಲೂಕಿನ 3, ಮಾಲೂರು ತಾಲ್ಲೂಕಿನ 4, ಕೆಜಿಎಫ್ ತಾಲ್ಲೂಕಿನ 3 ಹಾಗೂ ಬಂಗಾರಪೇಟೆ ತಾಲ್ಲೂಕಿನ 3 ಕೇಂದ್ರಗಳು ಒಟ್ಟು 26 ಕೇಂದ್ರಗಳಲ್ಲಿ ವೇಮಗಲ್ ಮತ್ತು ತಯಲೂರು ಎರಡು ಗ್ರಾಮೀಣ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ ಎಂದು ತಿಳಿಸಿದರು.
ಈ ಬಾರಿ ಕೋಲಾರ ಜಿಲ್ಲೆಯಲ್ಲಿ ಒಟ್ಟು 15,122 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆಯಲಿದ್ದಾರೆ. ಅದರಲ್ಲಿ ಹೊಸಬರು 13,874, ಮರು ಪರೀಕ್ಷೆ ಬರೆಯುತ್ತಿರುವವರು 929 ವಿದ್ಯಾರ್ಥಿಗಳು 319 ಖಾಸಗಿಯವರು ಹಾಜರಾಗಲಿದ್ದಾರೆ, ಅವರಲ್ಲಿ 8046 ವಿದ್ಯಾರ್ಥಿನಿಯರು 7076 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ಪ್ರತಿ ದಿನದ ಪರೀಕ್ಷಾ ಕಾರ್ಯದ ಚಟುವಟಿಕೆಗಳನ್ನು ವೆಬ್ ಕ್ಯಾಸ್ಟ್ ಮಾಡಲು ಕ್ರಮವಹಿಸಲಾಗಿದೆ. ಇದಕ್ಕೆ ಜಿಲ್ಲಾ ಪಂಚಾಯತಿಗಳಲ್ಲಿ ಜಿಲ್ಲಾ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗುತ್ತದೆ.
ಪರೀಕ್ಷಾ ಕೇಂದ್ರದ ಸುತ್ತ ಖಡಕ್ ರೂಲ್ಸ್: ಈಗಾಗಲೇ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ವೇಳಾಪಟ್ಟಿಯ ಅನ್ವಯ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿವೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು, ಒದಗಿಸಬೇಕಾದ ಸೌಲಭ್ಯಗಳ ಕುರಿತು ಈಗಾಗಲೇ ಸೂಚನೆಗಳನ್ನು ನೀಡಲಾಗುತ್ತಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶಿಸಲಾಗಿದೆ. ಪೊಲೀಸ್ ಇಲಾಖೆಯಿಂದ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ್ ಒದಗಿಸಲಾಗುತ್ತದೆ ಎಂದರು .
ಈ ಸಂದರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಅಶೋಕ್ ಸೇರಿದಂತೆ ಮತ್ತಿತರರು ಇದ್ದರು.