

ಶ್ರೀನಿವಾಸಪುರ: ಸರ್ಕಾರದ ನಿರ್ದೇಶನದಂತೆ ತಾಲ್ಲೂಕಿನ ಯಲ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 2ರವರೆಗೆ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಭಿವೃದ್ಧಿ ಅಧಿಕಾರಿ ಕೆ.ಪಿ. ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.
ಗ್ರಾಮದ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶುರುವಾದ ಸ್ವಚ್ಛತಾ ಅಭಿಯಾನವನ್ನು ಪರಿಶೀಲಿಸಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ ಜಯಂತಿಯ ಅಂಗವಾಗಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ ಹಾಗೂ ಸಾರ್ವಜನಿಕರ ಸಕ್ರಿಯ ಭಾಗವಹಿಸುವಿಕೆಯಿದೆ. ಇದರಿಂದಾಗಿ ಇನ್ನೂ ಹೆಚ್ಚಿನ ಸ್ಥಳಗಳಲ್ಲಿ ಸ್ವಚ್ಛತಾ ಚಟುವಟಿಕೆಗಳನ್ನು ಮುಂದುವರಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಪಂಚಾಯಿತಿ ಕಾರ್ಯದರ್ಶಿ ಶಿವಶಂಕರ್, ಯಲ್ದೂರು ಹೋಬಳಿ ಕರವೇ ಅಧ್ಯಕ್ಷ ಆರ್. ಅಮರೇಶ್, ತಾಲೂಕು ಕನ್ನಡ ಜನಜಾಗೃತಿ ವೇದಿಕೆ ಅಧ್ಯಕ್ಷ ಸುನಿಲ್, ಕರ ವಸೂಲಿಗಾರ ಅಮರನಾರಾಯಣ, ಗಣಕಯಂತ್ರ ನಿರ್ವಾಹಕ ವಸಂತ್ ಹಾಗೂ ಊರಿನ ಗ್ರಾಮಸ್ಥರು ಭಾಗವಹಿಸಿ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿದರು.
ಗ್ರಾಮದ ಸಮಗ್ರ ಸ್ವಚ್ಛತೆಯೊಂದಿಗೆ ಪರಿಸರದ ಹಿತಾಸಕ್ತಿ ಕಾಪಾಡುವ ದೃಷ್ಠಿಯಿಂದ ನಡೆಯುತ್ತಿರುವ ಈ ಅಭಿಯಾನದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಕರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

