

ಶ್ರೀನಿವಾಸಪುರ : ಅರಣ್ಯ ಇಲಾಖೆಯ ನೀತಿಯನ್ನು ವಿರೋಧಿಸಿ ವಿವಿಧ ಸಂಘಟನೆಗಳ ವತಿಯಿಂದ ಪಟ್ಟಣದ ನೌಕರರ ಭವನದಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾವು ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ನೀಲಟೂರು ಚಿನ್ನಪ್ಪರೆಡ್ಡಿ, ನಮ್ಮ ಸಂಘವು ಸದಾ ರೈತರ ಪರವಾಗಿ ನಿಂತಿದೆ. ಅರಣ್ಯ ಇಲಾಖೆಯ ಕ್ರಮಗಳಿಂದ ಭೂ ಸಂತ್ರಸ್ಥರಾಗಿರುವ ರೈತರಿಗೆ ಶಾಶ್ವತ ಪರಿಹಾರ ದೊರಕಬೇಕಿದೆ ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ಎಲ್ಲಾ ಸಂಘಟನೆಗಳ ಮುಖಂಡರು ಹಾಗೂ ರೈತರು ಕೋಲಾರದಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸುವ ಮೂಲಕ ಖಾಯಂ ಪರಿಹಾರಕ್ಕೆ ಒತ್ತಾಯಿಸಬೇಕು ಎಂದು ಕರೆ ನೀಡಿದರು.
ಕೆಪಿಆರ್ಎಸ್ ರಾಜ್ಯ ಉಪಾಧ್ಯಕ್ಷ ಪಿ.ಆರ್. ಸೂರ್ಯನಾರಾಯಣ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಅರಣ್ಯ ಇಲಾಖೆಯು ರೈತರ ಮೇಲೆ ದೌರ್ಜನ್ಯ ನಡೆಸುತ್ತಾ ಬರುತ್ತಿದೆ. ಈ ಸಮಸ್ಯೆಗೆ ಸರ್ಕಾರವೇ ಮುಂದಾಗಿ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕಿದೆ. ಇದಕ್ಕಾಗಿ ಎಲ್ಲಾ ಸಂಘಟನೆಗಳ ಮುಖಂಡರ ಸಲಹೆ ಹಾಗೂ ಸಹಕಾರ ಅಗತ್ಯವಿದೆ ಎಂದು ಹೇಳಿದರು.

