

ಶ್ರೀನಿವಾಸಪುರ : ರಾಜ್ಯ ಸರ್ಕಾರ ರೈತ ವಿರೋಧಿ ಕ್ರಮಗಳನ್ನು ಅನುಸರಿಸುತ್ತಿದ್ದು, ಅರಣ್ಯ ಇಲಾಖೆ ದೋರಣೆಯನ್ನು ಖಂಡಿಸಿ ರೈತರ ಪರ ಹೋರಾಟವನ್ನು ಮುಂದುವರಿಸಲಾಗುವುದು ಎಂದು ಅಖಿಲ ಭಾರತ ಕಿಸಾನ್ ಸಂಘದ ಕಾರ್ಯದರ್ಶಿ ವಿಜುಕೃಷ್ಣ ಎಚ್ಚರಿಕೆ ನೀಡಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಕೆಪಿಆರ್ಎಸ್ ಹಾಗೂ ಅಖಿಲ ಭಾರತ ಕಿಸಾನ್ ಸಂಘದ ವತಿಯಿಂದ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ನಡೆದ ವಿಧಾನಸಭೆ ಚರ್ಚೆಯಲ್ಲಿ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಕೇಳಿದ ಪ್ರಶ್ನೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ನೀಡಿದ ಉತ್ತರ ರೈತರ ಸಂಕಷ್ಟಗಳಿಗೆ ಪರಿಹಾರ ನೀಡದಂತಿದೆ ಎಂದು ಹೇಳಿದರು.
ಅರಣ್ಯ ಇಲಾಖೆ 110 ವರ್ಷಗಳ ನಂತರ ರೈತರನ್ನು ವಕ್ಕಲಿಬಿಸುತ್ತಿರುವುದು ಗಂಭೀರ ವಿಷಯ. ಕೆಲ ಗ್ರಾಮಗಳಲ್ಲಿ 30 ವರ್ಷಕ್ಕೂ ಹೆಚ್ಚು ಕಾಲ ಬೆಳೆಯುತ್ತಿದ್ದ 300ಕ್ಕೂ ಹೆಚ್ಚು ಮಾವಿನ ಮರಗಳನ್ನು ಕಡಿದು ಹಾಕಿರುವುದು ಖಂಡನೀಯ ಎಂದು ಅವರು ಹೇಳಿದರು.
ಅರಣ್ಯ ಹಕ್ಕು ಕಾಯ್ದೆಯಂತೆ 75 ವರ್ಷಗಳ ಕಾಲ ಅರಣ್ಯ ಪ್ರದೇಶದಲ್ಲಿ ವಾಸಿಸಿದವರಿಗೆ ಹಕ್ಕು ಪತ್ರ ನೀಡಬೇಕು. ಯಾವುದೇ ಕಾರಣಕ್ಕೂ ರೈತರನ್ನು ವಕ್ಕಲಿಬಿಸಬಾರದು ಎಂಬುದು ಕಾನೂನಿನ ಆಶಯ. ಹಿಮಾಚಲ ಪ್ರದೇಶದಲ್ಲಿ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ರೈತರ ಪರವಾಗಿ ಸ್ಟೇ ನೀಡಿದೆ. ಮುಂದಿನ ದಿನಗಳಲ್ಲಿ ರೈತರ ಪರ ಕಾನೂನು ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ತಿಳಿಸಿದರು.
ಕೆಪಿಆರ್ಎಸ್ ರಾಜ್ಯ ಉಪಾಧ್ಯಕ್ಷ ಪಿ.ಆರ್. ಸೂರ್ಯನಾರಾಯಣ ಮಾತನಾಡಿ, ಅರಣ್ಯ ಇಲಾಖೆಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿದರು. ಈ ವೇಳೆ ತಾಲೂಕಿನ ಪಾತಪಳ್ಳಿ, ದೊಡಮಲದೊಡ್ಡಿ, ಕೇತುಗಾನಹಳ್ಳಿ ಹಾಗೂ ಉನಿಕಿಲಿ ಗ್ರಾಮಗಳಿಗೆ ಭೇಟಿ ನೀಡಿ ಭೂಸಂತ್ರಸ್ಥ ರೈತರ ಸಮಸ್ಯೆಗಳನ್ನು ಪರಿಶೀಲಿಸಲಾಯಿತು.
ಪತ್ರಿಕಾಗೋಷ್ಠಿಯಲ್ಲಿ ಕೆಪಿಆರ್ಎಸ್ ರಾಜ್ಯಾಧ್ಯಕ್ಷ ಬಸವರಾಜು, ಜಂಟಿ ಕಾರ್ಯದರ್ಶಿ ವಲಸನ್, ಸಂಘಟನಾ ಕಾರ್ಯದರ್ಶಿ ಪ್ರಿಜಾ, ಸಂಘಟನಾ ಸಂಚಾಲಕ ಪಿ.ಆರ್. ನವೀನ್ಕುಮಾರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಮಂಗಮ್ಮ, ಜಿಲ್ಲಾಧ್ಯಕ್ಷ ಟಿ. ವೆಂಕಟೇಶ್, ಜಂಟಿ ಕಾರ್ಯದರ್ಶಿ ಭಾರತ್ರಾಜ್, ಮಾವು ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘದ ನೀಲಟೂರು ಚಿನ್ನಪ್ಪರೆಡ್ಡಿ, ತಾಲೂಕು ಕಾರ್ಯದರ್ಶಿ ಎ. ಸೈಯದ್ ಫಾರೂಕ್, ಗೌರವಾಧ್ಯಕ್ಷ ವೀರಪ್ಪ ಹಾಗೂ ಭೂಸಂತ್ರಸ್ಥ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

