

ಶ್ರೀನಿವಾಸಪುರ: ಅಲ್ಪಸಂಖ್ಯಾತ ಸಮುದಾಯದಲ್ಲಿ ಶೈಕ್ಷಣಿಕ ಅಭಿವೃದ್ಧಿ ಹಾಗೂ ಸಾಮಾಜಿಕ ಜಾಗೃತಿ ಅತ್ಯಂತ ಅಗತ್ಯವಾಗಿದೆ ಎಂದು ಮಾನ್ಯ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಜಿಲ್ಲಾ ಸಮಿತಿಯ ನಾಮ ನಿರ್ದೇಶನ ಸದಸ್ಯರಾದ ಶಬ್ಬೀರ್ ಅಹ್ಮದ್ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇಂದಿನ ಜಾಗತಿಕ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣವೇ ವ್ಯಕ್ತಿ ಹಾಗೂ ಸಮಾಜದ ಪ್ರಗತಿಗೆ ಮೂಲಾಧಾರವಾಗಿದೆ. ಆದರೆ ಅಲ್ಪಸಂಖ್ಯಾತ ಸಮುದಾಯದ ಅನೇಕ ವಿದ್ಯಾರ್ಥಿಗಳು ಆರ್ಥಿಕ ಹಿಂದುಳಿಕೆ, ಸರಿಯಾದ ಮಾರ್ಗದರ್ಶನದ ಕೊರತೆ, ಶಿಕ್ಷಣ ಸೌಲಭ್ಯಗಳ ಕುರಿತು ಮಾಹಿತಿ ಅಭಾವ ಮತ್ತು ಸಾಮಾಜಿಕ ಅಡೆತಡೆಗಳಿಂದ ಉನ್ನತ ಶಿಕ್ಷಣದಿಂದ ದೂರವಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ ಎಂದು ಅವರು ಹೇಳಿದರು.
ಈ ಸ್ಥಿತಿಯನ್ನು ಬದಲಾಯಿಸಲು ಪೋಷಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಜೊತೆಗೆ ಸರ್ಕಾರ ಒದಗಿಸುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಅವರು ಮನವಿ ಮಾಡಿದರು.
ಮಾನ್ಯ ಪ್ರಧಾನಮಂತ್ರಿಯವರ ಹೊಸ 15 ಅಂಶಗಳ ಕಾರ್ಯಕ್ರಮ ಅಲ್ಪಸಂಖ್ಯಾತ ಸಮುದಾಯದ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ರೂಪಿಸಲಾದ ಮಹತ್ವದ ಯೋಜನೆಯಾಗಿದೆ.
ಈ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ, ವಸತಿ ಸೌಲಭ್ಯ, ಉಚಿತ ಪುಸ್ತಕ ಹಾಗೂ ಸಮವಸ್ತ್ರ, ಕೌಶಲ್ಯಾಭಿವೃದ್ಧಿ ತರಬೇತಿ, ಸ್ವಯಂ ಉದ್ಯೋಗ ಪ್ರೋತ್ಸಾಹ ಮತ್ತು ಬ್ಯಾಂಕ್ ಸಾಲ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಇದರ ಉದ್ದೇಶ ಅಲ್ಪಸಂಖ್ಯಾತ ಸಮುದಾಯದ ಯುವಜನತೆಗೆ ಸಮಾನ ಅವಕಾಶ ಕಲ್ಪಿಸಿ ಅವರನ್ನು ಮುಖ್ಯವಾಹಿನಿಗೆ ತರಲಿರುವುದಾಗಿದೆ ಎಂದು ಶಬ್ಬೀರ್ ಅಹ್ಮದ್ ವಿವರಿಸಿದರು.
ಸರ್ಕಾರದ ಯೋಜನೆಗಳ ಬಗ್ಗೆ ಸಮುದಾಯದಲ್ಲಿ ಸಮರ್ಪಕ ಅರಿವು ಇಲ್ಲದಿರುವುದರಿಂದ ಹಲವರು ಪ್ರಯೋಜನ ಪಡೆಯಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಗ್ರಾಮ ಮಟ್ಟದಿಂದಲೇ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಸಮಾಜದ ಮುಖಂಡರು, ಶಿಕ್ಷಕರು ಹಾಗೂ ಯುವಕರು ಜನಜಾಗೃತಿ ಮೂಡಿಸುವ ಜವಾಬ್ದಾರಿ ವಹಿಸಬೇಕು ಎಂದು ಅವರು ಹೇಳಿದರು.
ಮಹಿಳಾ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕಾದ ಅಗತ್ಯವಿದೆ. ವಿದ್ಯಾವಂತ ಮಹಿಳೆಯರು ಕುಟುಂಬ ಹಾಗೂ ಸಮಾಜದ ಅಭಿವೃದ್ಧಿಗೆ ಪ್ರಮುಖ ಪಾತ್ರ ವಹಿಸುತ್ತಾರೆ. ಆದ್ದರಿಂದ ಹೆಣ್ಣು ಮಕ್ಕಳ ಶಿಕ್ಷಣವನ್ನು ನಿರ್ಲಕ್ಷ್ಯ ಮಾಡದೇ ಎಲ್ಲರೂ ಪ್ರೋತ್ಸಾಹ ನೀಡಬೇಕು ಎಂದು ಮನವಿ ಮಾಡಿದರು.
ಶಿಕ್ಷಣ ಮತ್ತು ಸಾಮಾಜಿಕ ಜಾಗೃತಿಯ ಮೂಲಕ ಸಮಾನ ಅವಕಾಶಗಳ ಸಮಾಜ ನಿರ್ಮಾಣ ಸಾಧ್ಯ. ಈ ದಿಸೆಯಲ್ಲಿ ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ಅರಿತು ಒಗ್ಗಟ್ಟಾಗಿ ಕೆಲಸ ಮಾಡಿದರೆ ಮಾತ್ರ ಅಲ್ಪಸಂಖ್ಯಾತ ಸಮುದಾಯದ ಭವಿಷ್ಯ ಉಜ್ವಲವಾಗಲಿದೆ ಎಂದು ಶಬ್ಬೀರ್ ಅಹ್ಮದ್ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

