

ಶ್ರೀನಿವಾಸಪುರ : ತಾಲ್ಲೂಕಿನ ಮೀಸಗಾನಹಳ್ಳಿ ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕವನ್ನು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಸರ್ವೇಶ್ ಪರಿಶೀಲಿಸಿದರು.
ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಒಟ್ಟು 245 ಶುದ್ಧ ಕುಡಿಯುವ ನೀರು ಘಟಕಗಳಿದ್ದು, ಅವುಗಳಲ್ಲಿ 216 ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ. ಉಳಿದ 29 ಘಟಕಗಳಿಗೆ ದುರಸ್ತಿ ಅಗತ್ಯವಿದ್ದು, ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.
ತಾಲ್ಲೂಕಿನಲ್ಲಿ ಸುಮಾರು 18 ಗ್ರಾಮಗಳು ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಿಸುವ ಸಾಧ್ಯತೆ ಇದೆ ಎಂದು ಗುರುತಿಸಲಾಗಿದೆ. ಆ ಗ್ರಾಮಗಳಲ್ಲಿ ನೀರಿನ ಕೊರತೆಯನ್ನು ನೀಗಿಸಲು ಖಾಸಗಿ ಕೊಳವೆ ಬಾವಿ ಮಾಲೀಕರು ಹಾಗೂ ಟ್ಯಾಂಕರ್ ಮಾಲೀಕರನ್ನು ಈಗಾಗಲೇ ಗುರುತಿಸಲಾಗಿದೆ. ಅಗತ್ಯವಿದ್ದಲ್ಲಿ ತಕ್ಷಣ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ನೀರಿನ ಸಮಸ್ಯೆ ಕುರಿತು ತಕ್ಷಣ ಮಾಹಿತಿ ಸಂಗ್ರಹಿಸಲು ಮೂವರು ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಸಾರ್ವಜನಿಕರು ದೂರವಾಣಿ ಮೂಲಕ ಸಮಸ್ಯೆ ತಿಳಿಸಿದಲ್ಲಿ, ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ತಂದು ತ್ವರಿತವಾಗಿ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದೇ ವೇಳೆ, ನೀರಿನ ಕೊರತೆ ಕಂಡುಬಂದಲ್ಲಿ ಖಾಸಗಿ ಕೊಳವೆ ಬಾವಿಗಳಿಂದ ನೀರು ಪಡೆದುಕೊಳ್ಳುವುದು, ಬಾವಿಗಳು ಬತ್ತಿಹೋದರೆ ಅವುಗಳ ಆಳವನ್ನು ಹೆಚ್ಚಿಸುವುದು ಸೇರಿದಂತೆ ಹಲವು ಕ್ರಮಗಳನ್ನು ರೂಪಿಸಲಾಗಿದೆ. ಜಲ್ ಜೀವನ್ ಮಿಷನ್ (JJM) ಯೋಜನೆಯಡಿ ಈಗಾಗಲೇ 170 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲಾಗುತ್ತಿದ್ದು, ಉಳಿದ ಗ್ರಾಮಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ಯೋಜನೆ ಕಾಮಗಾರಿಗಳ ವೇಳೆ ರಸ್ತೆಗಳನ್ನು ಅಗೆದು ಹಾನಿಗೊಳಿಸಲಾಗಿದೆ ಎಂಬ ಸಾರ್ವಜನಿಕರ ದೂರಿಗೆ ಪ್ರತಿಕ್ರಿಯಿಸಿದ ಅವರು, ರಸ್ತೆ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಗ್ರಾಮ ಪಂಚಾಯಿತಿ ಅಧಿಕಾರಿಗಳು ಕುಡಿಯುವ ನೀರಿನ ತೊಟ್ಟಿಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಬೇಕು. ತುರ್ತು ಪರಿಸ್ಥಿತಿಗೆ ಪಂಪ್ಸೆಟ್ಗಳನ್ನು ಸಿದ್ಧವಾಗಿಡಬೇಕು. ಸಾರ್ವಜನಿಕರು ನೀರಿನ ಸಮಸ್ಯೆ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣ ಮಾಹಿತಿ ನೀಡಬೇಕು ಎಂದು ಅವರು ಮನವಿ ಮಾಡಿದರು.


