

ಶ್ರೀನಿವಾಸಪುರ : ತಾಲ್ಲೂಕನ್ನು ಜಿಲ್ಲೆಯಲ್ಲಿ ಸ್ವಚ್ಛತೆಯ ಮಾದರಿಯನ್ನಾಗಿಸಲು ಸಂಕಲ್ಪ ಮಾಡಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಸರ್ವೇಶ್ ತಿಳಿಸಿದ್ದಾರೆ.
ಪಟ್ಟಣದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ನಡೆದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ 25 ಗ್ರಾಮ ಪಂಚಾಯಿತಿಗಳು ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ವಾರದಿಂದಲೇ ಎಲ್ಲಾ ಗ್ರಾಮಗಳಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಶ್ರೀನಿವಾಸಪುರವನ್ನು ಸ್ವಚ್ಛತೆಯ ಕ್ಷೇತ್ರದಲ್ಲಿ ಜಿಲ್ಲೆಗೆ ಮಾದರಿಯನ್ನಾಗಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಅವರು ಮನವಿ ಮಾಡಿದರು.
ತಾಲ್ಲೂಕಿನಲ್ಲಿ ಒಟ್ಟು 218 ಕುಡಿಯುವ ನೀರಿನ ಶುದ್ಧೀಕರಣ ಘಟಕಗಳಿದ್ದು, ಅವುಗಳಲ್ಲಿ 192 ಘಟಕಗಳು ಕಾರ್ಯನಿರ್ವಹಿಸುತ್ತಿವೆ. ಉಳಿದ 27 ಘಟಕಗಳು ದುರಸ್ತಿ ಹಂತದಲ್ಲಿದ್ದು, ಶೀಘ್ರದಲ್ಲೇ ಅವುಗಳನ್ನು ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗುವುದು ಎಂದರು. ಅಲ್ಲದೆ, ತಾಲ್ಲೂಕಿನ 192 ಕೆರೆಗಳ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಪಿಡಿಒಗಳ ಕೊರತೆ ಇದ್ದರೂ ಅಭಿವೃದ್ಧಿ ಅಧಿಕಾರಿಗಳು ಶಕ್ತಿಮೀರಿದ ಸೇವೆ ಸಲ್ಲಿಸುತ್ತಿದ್ದಾರೆ. ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗಾಗಿ ಸಮಗ್ರ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.
ತೆರಿಗೆ ಸಂಗ್ರಹದಲ್ಲಿ ಶ್ರೀನಿವಾಸಪುರ ತಾಲ್ಲೂಕು ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಸ್ವಂತ ಸಂಪನ್ಮೂಲಗಳ ಬಲವರ್ಧನೆಗಾಗಿ ತೆರಿಗೆ ಸಂಗ್ರಹಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ನಿರಂತರ ಸಭೆಗಳು ಹಾಗೂ ಕಟ್ಟುನಿಟ್ಟಿನ ಕ್ರಮಗಳಿಂದ ಉತ್ತಮ ಸಾಧನೆ ಸಾಧ್ಯವಾಗಿದೆ ಎಂದು ತಿಳಿಸಿದರು.
ಗಡಿಭಾಗದ ಪುಲಗೂರಕೋಟೆ ಗ್ರಾಮ ಪಂಚಾಯಿತಿ ಶೇ.100ರಷ್ಟು ತೆರಿಗೆ ಸಂಗ್ರಹ ಸಾಧನೆ ಮಾಡಿರುವುದನ್ನು ಅವರು ಶ್ಲಾಘಿಸಿದರು. ಈ ಸಾಧನೆಗೆ ಕಾರಣರಾದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದರು.
ಇದೇ ವೇಳೆ ಸ್ವಚ್ಛ ಭಾರತ ಜಿಲ್ಲಾ ಸಂಯೋಜಕ ಜಗದೀಶ್ ಮಾತನಾಡಿ, ಗ್ರಾಮ ಪಂಚಾಯಿತಿಗಳಿಗೆ ಒದಗಿಸಿರುವ ಸ್ವಚ್ಛತಾ ವಾಹನಗಳಿಗೆ ಕ್ಯಾಮೆರಾ ಹಾಗೂ ಜಿಪಿಎಸ್ ಅಳವಡಿಸಲಾಗುವುದು. ಇದರಿಂದ ವಾಹನಗಳ ಸಂಚಲನವನ್ನು ನಿಖರವಾಗಿ ಮೇಲ್ವಿಚಾರಣೆ ಮಾಡಲು ಸಾಧ್ಯವಾಗುತ್ತದೆ ಎಂದರು.
ಜೊತೆಗೆ ಎನ್ಆರ್ಎಲ್ಎಂ ಸಿಬ್ಬಂದಿಯನ್ನು ಪಂಚಾಯಿತಿ ಕಾರ್ಯಗಳಲ್ಲಿ ಬಳಸಿಕೊಳ್ಳುವ ಮೂಲಕ ಕಾರ್ಯಕ್ಷಮತೆ ಹೆಚ್ಚಿಸಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ವಾಟರ್ ಬೋರ್ಡ್ ಎಇಇ ಸುರೇಶ್, ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಮಂಜುನಾಥ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ನರೇಗಾ ಇಂಜಿನಿಯರ್ಗಳು ಉಪಸ್ಥಿತರಿದ್ದರು.

