


ಶ್ರೀನಿವಾಸಪುರ : ಕೇಂದ್ರ ಚುನಾವಣಾ ಆಯೋಗದ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಕಾರ್ಯಕ್ರಮದಡಿ ನಿಖರ ಹಾಗೂ ಶುದ್ಧ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಉದ್ದೇಶದಿಂದ ಗ್ರಾಮೀಣ ಮಟ್ಟದಲ್ಲಿ ಜಾಗೃತಿ ಜಾಥಾ ಸೇರಿದಂತೆ ವಿವಿಧ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಾಲೂಕು ಚುನಾವಣಾಧಿಕಾರಿ (ಇಆರ್ಒ) ಟಿ.ಕೆ. ರಮೇಶ್ ತಿಳಿಸಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಕ್ಷೇತ್ರದಲ್ಲಿ 2 ಲಕ್ಷಕ್ಕೂ ಅಧಿಕ ಮತದಾರರಿದ್ದು, ಜೂನ್ 30ರಿಂದ ಜುಲೈ 29ರವರೆಗೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಮನೆಮನೆಗೆ ಭೇಟಿ ನೀಡಿ ಮತದಾರರ ಮಾಹಿತಿ ಸಂಗ್ರಹಿಸಲಿದ್ದಾರೆ. ಈ ವೇಳೆ ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ನೀಡಿ ಸಹಕರಿಸಬೇಕು ಎಂದು ಮನವಿ ಮಾಡಿದರು.
ಗಣತಿ ನಮೂನೆಗೆ ಸಹಿ ಮಾಡಿ ಸಲ್ಲಿಸದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗುವ ಸಾಧ್ಯತೆ ಇರುವುದರಿಂದ ಎಲ್ಲರೂ ಜಾಗರೂಕರಾಗಿರಬೇಕು ಎಂದರು.
ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಅದರ ವಿರುದ್ಧ ಆಕ್ಷೇಪಣೆ ಅಥವಾ ತಿದ್ದುಪಡಿ ಅರ್ಜಿಗಳನ್ನು ಆಗಸ್ಟ್ 5ರಿಂದ ಸೆಪ್ಟೆಂಬರ್ 4ರವರೆಗೆ ಸಲ್ಲಿಸಬಹುದು. ಆಕ್ಷೇಪಣೆಗಳ ವಿಲೇವಾರಿ ಆಗಸ್ಟ್ 15ರಿಂದ ಸೆಪ್ಟೆಂಬರ್ 3ರವರೆಗೆ ನಡೆಯಲಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 7ರಂದು ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದರು.
ಕ್ಷೇತ್ರದಲ್ಲಿ ಪರಿಷ್ಕರಣೆ ಕಾರ್ಯವನ್ನು ಯಶಸ್ವಿಯಾಗಿ ನಡೆಸಲು ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರ ಪಡೆಯಲಾಗುತ್ತಿದೆ. ರಾಜಕೀಯ ಪಕ್ಷಗಳ ಅಧಿಕೃತ ಏಜೆಂಟರು ಸಲ್ಲಿಸುವ ಆಕ್ಷೇಪಣೆಗಳನ್ನೂ ನಿಯಮಾನುಸಾರ ಪರಿಶೀಲಿಸಿ ಪರಿಗಣಿಸಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಹಾಯಕ ಚುನಾವಣಾಧಿಕಾರಿ (ಎಇಆರ್ಒ) ಜಿ.ಎನ್. ಸುದೀಂದ್ರ, ಕಾರ್ಯನಿರ್ವಾಹಕ ಅಧಿಕಾರಿ ಕೆ. ಸರ್ವೇಶ್ ಹಾಗೂ ಚುನಾವಣಾ ವಿಭಾಗದ ಸಿಬ್ಬಂದಿ ಅಭಿಷೇಕ್ ಉಪಸ್ಥಿತರಿದ್ದರು.

