

ಮಂಗಳೂರು: ಸಂತ ರೀಟಾ ಸಮೂಹ ಶಿಕ್ಷಣ ಸಂಸ್ಥೆಗಳಾದ ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆ, ಸಂತ ರೀಟಾ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕಾಸ್ಸಿಯಾ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಉತ್ಸಾಹ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು.
ಶಾಲಾ ಬ್ಯಾಂಡ್ ತಂಡ ಹಾಗೂ ಎನ್.ಸಿ.ಸಿ ಕೆಡೆಟ್ಗಳ ಗೌರವಪೂರ್ವಕ ಮೆರವಣಿಗೆಯೊಂದಿಗೆ ಗಣ್ಯರನ್ನು ಕಾರ್ಯಕ್ರಮದ ಸ್ಥಳಕ್ಕೆ ಕರೆತರಲಾಯಿತು. ಸಂತ ರೀಟಾ ಸಮೂಹ ಶಿಕ್ಷಣ ಸಂಸ್ಥೆಗಳ ಜಂಟಿ ಕಾರ್ಯದರ್ಶಿ ರೆ . ಫಾ. ರಿತೇಶ್ ರೊಡ್ರಿಗಸ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ರಾಷ್ಟ್ರಗೀತೆ ಹಾಡಲಾಯಿತು.
ಸಂತ ರೀಟಾ ಚರ್ಚಿನ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ಅಶೋಕ್ ರೋಡ್ರಿಗಸ್, ಕಾರ್ಯದರ್ಶಿ ಶ್ರೀಮತಿ ಲೊಯೋಲಾ ಡಿಸೋಜಾ, 22 ಆಯೋಗಗಳ ಸಂಯೋಜಕರಾದ ಶ್ರೀ ಜೋಸ್ಸಿ ಥಿಯೋದರ್, ಕಾಸ್ಸಿಯಾ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಆಲಿಸ್ ಕೆ.ಜೆ ಹಾಗೂ ಸಂತ ರೀಟಾ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಡೋರಿನ್ ತಾವ್ರೊ ಉಪಸ್ಥಿತರಿದ್ದರು.
ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಮೆಟಿಲ್ಡಾ ಡಿಕೋಸ್ಟಾ ಅವರು ಅತಿಥಿಗಳು ಹಾಗೂ ಸಭಿಕರನ್ನು ಸ್ವಾಗತಿಸಿದರು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ರೆ. ಫಾ. ರಿತೇಶ್ ರೋಡ್ರಿಗಸ್ ಅವರು ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ವಿವರಿಸಿ, ವಿದ್ಯಾರ್ಥಿಗಳು ದೇಶಭಕ್ತಿ, ಏಕತೆ ಹಾಗೂ ಜವಾಬ್ದಾರಿಯುತ ನಾಗರಿಕತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.
ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಮನಮೋಹಕ ನೃತ್ಯ ಪ್ರದರ್ಶನ ಹಾಗೂ ದೇಶಭಕ್ತಿ ಗೀತೆಗಳನ್ನು ಒಳಗೊಂಡ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.
ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ಚೈತ್ರಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀಮತಿ ಸಾರಾ ಅವರು ವಂದನಾರ್ಪಣೆ ಸಲ್ಲಿಸಿದರು. ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಅಮೂಲ್ಯ ಜೀವನವನ್ನು ತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುತ್ತಾ, ದೇಶಭಕ್ತಿ ಹಾಗೂ ರಾಷ್ಟ್ರಪ್ರೇಮದ ಭಾವನೆಯೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು.















