

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಣಕಾಸು ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿರೋಧ ಪಕ್ಷಗಳ ತೀವ್ರ ಒತ್ತಡ ಹಾಗೂ ಪ್ರತಿಭಟನೆಗೆ ಮಣಿದು ಸಚಿವ ಬಿ. ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.
ನನ್ನಿಂದ ಕಾಂಗ್ರೆಸ್ ಪಕ್ಷಕ್ಕಾಗಲಿ ಅಥವಾ ಸರ್ಕಾರಕ್ಕಾಗಲಿ ಯಾವುದೇ ರೀತಿಯ ಮುಜುಗರ ಉಂಟಾಗುವುದು ಬೇಡ. ನನ್ನನ್ನು ಅನಗತ್ಯವಾಗಿ ಈ ಪ್ರಕರಣದಲ್ಲಿ ಟಾರ್ಗೆಟ್ ಮಾಡಲಾಗುತ್ತಿದೆ” ಎಂದು ಸ್ಪಷ್ಟಪಡಿಸಿರುವ ಅವರು, ರಾಜೀನಾಮೆ ಸಲ್ಲಿಕೆಗೆ ಮುಂದಾಗಿದ್ದಾರೆ.
ಈ ಬೆಳವಣಿಗೆಯ ಬೆನ್ನಲ್ಲೇ ಸಚಿವ ಬಿ. ನಾಗೇಂದ್ರ ಅವರು ನಾಯಕರೊಂದಿಗೆ ದೂರವಾಣಿ ಮೂಲಕ ಸುಮಾರು 15 ನಿಮಿಷಗಳ ಕಾಲ ಸುದೀರ್ಘ ಚರ್ಚೆ ನಡೆಸಿದ್ದಾರೆ. ಚರ್ಚೆಯ ವೇಳೆ, “ಕಳೆದ ಚುನಾವಣೆಯಲ್ಲಿ ದಲಿತ ಹಾಗೂ ಹಿಂದುಳಿದ ಸಮುದಾಯಗಳು ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ಬೆಂಬಲಿಸಿವೆ. ಮುಂದಿನ ಚುನಾವಣೆಗಳಲ್ಲೂ ಈ ಮತಬ್ಯಾಂಕ್ ಹಾಗೂ ಬೆಂಬಲವನ್ನು ಗಟ್ಟಿಯಾಗಿ ಕಾಯ್ದುಕೊಳ್ಳುವುದು ಅಗತ್ಯವಿದೆ” ಎಂದು ತಮ್ಮ ನಿಲುವನ್ನು ವ್ಯಕ್ತಪಡಿಸಿ, ಹುದ್ದೆಗೆ ರಾಜೀನಾಮೆ ನೀಡುವ ಇಚ್ಛೆಯನ್ನು ತಿಳಿಸಿದ್ದಾರೆ.
ನಾಗೇಂದ್ರ ಅವರ ರಾಜೀನಾಮೆ ನಿರ್ಧಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ನಾಯಕರು, “ಈ ವಿಚಾರವನ್ನು ತಕ್ಷಣವೇ ಪಕ್ಷದ ಹೈಕಮಾಂಡ್ ಗಮನಕ್ಕೆ ತರಲಾಗುವುದು. ಹೈಕಮಾಂಡ್ ಜೊತೆ ಕೂಲಂಕಷವಾಗಿ ಚರ್ಚಿಸಿದ ನಂತರವಷ್ಟೇ ಅಂತಿಮ ನಿರ್ಧಾರವನ್ನು ನಿಮಗೆ ತಿಳಿಸಲಾಗುವುದು” ಎಂದು ಹೇಳಿದ್ದಾರೆ. ಸದ್ಯ ಬಿ. ನಾಗೇಂದ್ರ ಅವರ ಈ ನಿರ್ಧಾರದಿಂದ ರಾಜ್ಯ ರಾಜಕಾರಣದಲ್ಲಿ ಮತ್ತಷ್ಟು ಕಾವು ಏರಿದ್ದು, ಹೈಕಮಾಂಡ್ ನೀಡುವ ನಿರ್ದೇಶನದತ್ತ ಎಲ್ಲರ ಚಿತ್ತ ನೆಟ್ಟಿದೆ. ಆದರೆ ಸಂಜೆ ಒಳಗೆ ರಾಜೀನಾಮೆ ನೀಡುವ ಸಾಧ್ಯತೆ ಇದೆ.

