

ರಾಜಸ್ಥಾನ: ಕೋಟಾ ಜಿಲ್ಲೆಯ ದೆಹಲಿ–ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ಕನಿಷ್ಠ 8 ಮಂದಿ ಮೃತಪಟ್ಟಿದ್ದಾರೆ. ಭೋಪಾಲ್ನಿಂದ ರಾಜಸ್ಥಾನದ ಖಾಟು ಶ್ಯಾಮ್ ದೇವಸ್ಥಾನಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ರಸ್ತೆ ಬದಿಯ ಕಂದಕಕ್ಕೆ ಬಿದ್ದಿದೆ.
ಬಸ್ನಲ್ಲಿ ಮಕ್ಕಳು ಹಾಗೂ ವೃದ್ಧರು ಸೇರಿದಂತೆ ಒಟ್ಟು 21 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದ್ದು, ಅಪಘಾತದ ನಿಖರ ಕಾರಣ ಇನ್ನೂ ದೃಢಪಟ್ಟಿಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ.
ಅಪಘಾತದ ಬಳಿಕ ಗಾಯಾಳುಗಳನ್ನು ಕೋಟಾದ ಎಂ.ಬಿ.ಎಸ್. ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕೋಟಾ ಜಿಲ್ಲಾಧಿಕಾರಿ ಪಿಯೂಷ್ ಸಾಮರಿಯಾ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಈ ಘಟನೆಯಲ್ಲಿ 8 ಮಂದಿ ಮೃತಪಟ್ಟಿರುವುದನ್ನು ಜಿಲ್ಲಾಧಿಕಾರಿ ಖಚಿತಪಡಿಸಿದ್ದಾರೆ

