

ಬ್ರಹ್ಮಾವರ: ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ವಿವಾದ ವಿಕೋಪಕ್ಕೆ ತಿರುಗಿದ ಪರಿಣಾಮ ರೌಡಿಶೀಟರ್ ಸುಜಿತ್ ಪಿಂಟೊ (43) ಎಂಬಾತನನ್ನು ಕಬ್ಬಿಣದ ರಾಡ್ನಿಂದ ಹೊಡೆದು ಹತ್ಯೆಗೈದ ಘಟನೆ ಮಂಗಳವಾರ ರಾತ್ರಿ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಬೈಕಾಡಿ ಸರ್ಕಲ್ನಲ್ಲಿ ನಡೆದಿದೆ. ಮೃತ ಸುಜಿತ್ ಪಿಂಟೊಗೆ ಮನೆಗೆ ಸಾಮಗ್ರಿಗಳನ್ನು ಪೂರೈಸುತ್ತಿದ್ದ ರಿಕ್ಷಾ ಚಾಲಕ ಪ್ರಮೋದ್ಗೆ ಹಣ ಪಾವತಿಸುವುದು ಬಾಕಿ ಇತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ಇಬ್ಬರ ನಡುವೆ ಹಣಕಾಸಿನ ವಿವಾದ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಮೋದ್ ಸುಜಿತ್ ಪಿಂಟೊನನ್ನು ತಾನು ಇದ್ದ ಸ್ಥಳಕ್ಕೆ ಬರುವಂತೆ ಕರೆಸಿಕೊಂಡಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ರೌಡಿ ಶೀಟರ್ ಸುಜಿತ್ ಪಿಂಟೋ ಮೂಲತಹ ಕಲ್ಯಾಣಪುರದವನಾಗಿದ್ದು, ಇತ್ತೀಚಿನ ಕೆಲವು ವರ್ಷಗಳ ಹಿಂದೆ ಬೈಕಾಡಿಯಲ್ಲಿ ಬಂದು ನೆಲಸಿದ್ದನು.
ಅದರಂತೆ ಸ್ಥಳಕ್ಕೆ ತೆರಳಿದ್ದ ಸುಜಿತ್ ಪಿಂಟೊ ಮತ್ತು ಪ್ರಮೋದ್ ಮದ್ಯದ ಅಮಲಿನಲ್ಲಿ ಪರಸ್ಪರ ಜಗಳವಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಆಕ್ರೋಶಗೊಂಡ ಪ್ರಮೋದ್ ಕಬ್ಬಿಣದ ರಾಡ್ನಿಂದ ಸುಜಿತ್ ಪಿಂಟೊನ ತಲೆಗೆ ಬಲವಾಗಿ ಹೊಡೆದಿದ್ದು, ಪರಿಣಾಮ ಆತ ಮೃತಪಟ್ಟಿದ್ದಾನೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ
ಮೃತ ಸುಜಿತ್ ಪಿಂಟೊ ಈ ಹಿಂದೆ ಹಲವು ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 2018ರಲ್ಲಿ ಮಣಿಪಾಲದಲ್ಲಿ ನಡೆದ ಕ್ಲಬ್ ಮಾಲಕ ಗುರುಪ್ರಸಾದ್ ಭಟ್ ಕೊಲೆ ಪ್ರಕರಣ ಹಾಗೂ 2020ರಲ್ಲಿ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕನಿಡಿಯೂರು ಲಕ್ಷ್ಮಿನಗರದಲ್ಲಿ ನಡೆದ ಯೋಗೀಶ್ ಪೂಜಾರಿ ಕೊಲೆ ಪ್ರಕರಣದಲ್ಲೂ ಈತ ಆರೋಪಿಯಾಗಿದ್ದ ಎಂದು ತಿಳಿದುಬಂದಿದೆ.

