

ಕುಂದಾಪುರ: ಸಮಾಜ ಸುಸ್ಥಿರವಾಗಿ ಅಭಿವೃದ್ಧಿಯಾಗಬೇಕಾದರೆ ಪ್ರತಿಯೊಬ್ಬರು ಶಿಕ್ಷಣ ಪಡೆಯುವುದು ಮತ್ತು ನೀಡುವುದು ಮುಖ್ಯ ಜವಾಬ್ದಾರಿಯಾಗಿರುತ್ತದೆ ಎಂದು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಇದರ ಪ್ರೊಚಾನ್ಸಲರ್ ಡಾ.ಹೆಚ್.ಎಸ್.ಬಲ್ಲಾಳ್ ಹೇಳಿದರು.
ಅವರು ನವೆಂಬರ್ 14ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜು ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇವರ ಮಾರ್ಗದರ್ಶನದಲ್ಲಿ 31-01-2027ರಂದು ಆಯೋಜಿಸುತ್ತಿರುವ “ಕುಂದಥಾನ್” ಮ್ಯಾರಥಾನ್ ನ ವೆಬ್ ಸೈಟ್ kundathon.basck.in ಮತ್ತು ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದರು.
ಉತ್ತಮ ಶಿಕ್ಷಣದಿಂದ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ. ಅಲ್ಲದೇ ಹಳ್ಳಿಯ ಜನರಿಗೆ ಮತ್ತು ಮಹಿಳೆಯರಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಮೂಲಕ ಅವರನ್ನು ಮುಖ್ಯವಾಹಿನಿಗೆ ತರುವಂತೆ ಆಗಬೇಕು. ಅಲ್ಲದೇ ಕೌಶಲ್ಯ ಆಧಾರಿತ ಶಿಕ್ಷಣವನ್ನು ಸಹ ನೀಡುವ ಮೂಲಕ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಹೇಳಿದರು. ಈ ಮ್ಯಾರಥಾನ್ ನಲ್ಲಿ ಗ್ರಾಮೀಣ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರೇರಣೆ ನೀಡಬೇಕು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ಇದರ ಕಾರ್ಯದರ್ಶಿ ಡಾ.ನಾರಾಯಣ ಸಭಾಹಿತ ಮಾತನಾಡಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರೇರಣೆ ನೀಡಬೇಕು. ಕುಂದಥಾನ್ ಎಂಬ ಈ ಮ್ಯಾರಥಾನ್ ಸಮುದಾಯದೊಂದಿಗೆ ಸಂಪರ್ಕ ಬೆಳೆಸುವಂತಾಗಲಿ ಮ್ಯಾರಥಾನ್ ಆಯೋಜನೆಯಲ್ಲಿ ಮಾಹೆ ಸದಾ ಪ್ರೋತ್ಸಾಹ ನೀಡುತ್ತದೆ ಎಂದು ಹೇಳಿದರು .
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷ ಕೆ ಶಾಂತಾರಾಮ್ ಪ್ರಭು ಮಾತನಾಡಿ “ಕುಂದಥಾನ್” ಮ್ಯಾರಥಾನ್ ಯಶಸ್ವಿಯಾಗಿ ನಡೆಸುವಲ್ಲಿ ಎಲ್ಲರ ಪಾತ್ರ ಮುಖ್ಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಕೆ.ದೇವದಾಸ ಕಾಮತ್, ರಾಜೇಂದ್ರ ತೋಳಾರ್, ನೇರಂಬಳ್ಳಿ ರಾಘವೇಂದ್ರ ರಾವ್, ಜಯಕರ ಶೆಟ್ಟಿ, , ಆಡಳಿತ ಮಂಡಳಿಯ ಕಾರ್ಯದರ್ಶಿ ಯು ಎಸ್ ಶೆಣೈ ಮತ್ತು ಸದಸ್ಯರಾದ ಪ್ರಜ್ಞೇಶ್ ಪ್ರಭು ಉಪಸ್ಥಿತರಿದ್ದರು.
ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಸರೋಜ ಎಮ್ ವಂದಿಸಿದರು. ಉಪನ್ಯಾಸಕಿಯರಾದ ಶೈಲಾ ಆರ್ ಕಾರ್ಯಕ್ರಮ ನಿರೂಪಿಸಿ ಸ್ಮಿತಾ ಪರಿಚಯಿಸಿದರು.


