


ಶ್ರೀನಿವಾಸಪುರ: ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ, ಅವುಗಳಿಗೆ ಸೂಕ್ತ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ ಅತ್ಯಂತ ಉಪಯುಕ್ತವಾಗಿದೆ ಎಂದು ಸಮೂಹ ಸಂಪನ್ಮೂಲ ವ್ಯಕ್ತಿ (ಸಿಆರ್ಪಿ) ಗೀತಾ ಹೇಳಿದರು.
ಪಟ್ಟಣದ ತ್ಯಾಗರಾಜ ಬಡಾವಣೆಯ ಪಿ.ಎಂ.ಶ್ರೀ (PM SHRI) ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಸಮೂಹ ಸಂಪನ್ಮೂಲ ಕೇಂದ್ರದ ವತಿಯಿಂದ ಆಯೋಜಿಸಿದ್ದ 2026–27ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಪಠ್ಯ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ, ಕ್ರೀಡಾ ಹಾಗೂ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಅವರ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗುತ್ತದೆ. ಸ್ಪರ್ಧೆಗಳಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವದೊಂದಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಂಗವಾಗಿ ಕ್ಲಸ್ಟರ್ ವ್ಯಾಪ್ತಿಯ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಭಕ್ತಿಗೀತೆ, ಜಾನಪದ ಗೀತೆ, ಭಾಷಣ, ಚಿತ್ರಕಲೆ, ಅಭಿನಯ ಗೀತೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆದವು. ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಕೆ.ಎಸ್. ಪ್ರಮೀಳ, ಎಸ್ಡಿಎಂಸಿ ಅಧ್ಯಕ್ಷ ಮಂಜುನಾಥ್, ಟಿ.ಪಿ.ಒ. ಸುದೀರ್ ಕುಮಾರ್ ಜೋಶಿ, ಬಿಐಆರ್ಟಿ ಜಿ.ವಿ. ಚಂದ್ರಪ್ಪ, ಸಿಆರ್ಪಿ ರಾಧಾಕೃಷ್ಣ, ಇಸಿಒಗಳಾದ ವೆಂಕಟರವಣಪ್ಪ ಮತ್ತು ಕೋದಂಡಪ್ಪ, ಪೊಲೀಸ್ ಹೆಡ್ ಕಾನ್ಸ್ಟೇಬಲ್ ನಯಿಮ್ ತಾಜ್, ಶಿಕ್ಷಕರಾದ ನಾರಾಯಣಸ್ವಾಮಿ, ಶಿವಕುಮಾರ್, ಗೌರಮ್ಮ, ರಾಧಮ್ಮ, ನಿವೃತ್ತ ಶಿಕ್ಷಕ ಕೆ.ಸಿ. ರಾಮಸುಬ್ಬು ಸೇರಿದಂತೆ ಕ್ಲಸ್ಟರ್ ವ್ಯಾಪ್ತಿಯ ವಿವಿಧ ಶಾಲೆಗಳ ಶಿಕ್ಷಕರು, ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

