ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಕೊಡುಗೆ ಬಹುಮುಖ್ಯ-ಎಸ್.ಮುನಿಸ್ವಾಮಿ

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಕೊಡುಗೆ ಬಹುಮುಖ್ಯ-ಎಸ್.ಮುನಿಸ್ವಾಮಿ
ಕೋಲಾರ : ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಕೊಡುಗೆ ಬಹುಮುಖ್ಯವಾಗಿದ್ದು, ಶಿಕ್ಷಣ ವ್ಯವಸ್ಥೆಯು ದೇಶದ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ ಅವರು ತಿಳಿಸಿದರು. 
 ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರ ದಿನಾಚರಣೆ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಕುರಿತು ಅವರು ಮಾತನಾಡಿದರು. ಉತ್ತಮ ಸಮಾಜವನ್ನು ನಿರ್ಮಿಸುವ ಜವಾಬ್ದಾರಿ ಶಿಕ್ಷಕರ ಮೇಲಿರುತ್ತದೆ.  ಮಕ್ಕಳನ್ನು ತಿದ್ದಿ ತೀಡಿ ಸತ್ಪ್ರಜೆಗಳನ್ನಾಗಿ ಶಿಕ್ಷಕರು ಮಾಡುತ್ತಾರೆ. ಒಂದು ಮಗುವಿನ  ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅಮೂಲ್ಯವಾದದ್ದು ಎಂದು ತಿಳಿಸಿದರು. 
 ಕೋಲಾರ ಜಿಲ್ಲೆಯಲ್ಲಿ ಒಟ್ಟು 2565 ಶಾಲೆಗಳಿದ್ದು, ಸುಮಾರು 7 ಸಾವಿರ ಶಿಕ್ಷಕರಿದ್ದಾರೆ. ಕರ್ನಾಟಕಕ್ಕೆ ಅತಿ ಹೆಚ್ಚು ಶಿಕ್ಷಕರನ್ನು ನೀಡಿರುವ ಜಿಲ್ಲೆ ಕೋಲಾರ. ಕೋಲಾರದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸ್ಪರ್ಧಾತ್ಮಕ ವರ್ಷಗಳ ತರಬೇತಿ ಕೇಂದ್ರವನ್ನು ಪ್ರಾರಂಭಿಸಲಾಗುವುದು. ಇದರಿಂದ ಯುವಜನತೆ ಸರ್ಕಾರಿ ಉದ್ಯೋಗಗಳನ್ನು ಪಡೆಯಲು ನೆರವಾಗುತ್ತದೆ ಎಂದರು. 
 ಮಕ್ಕಳಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಬೇಕು. ಸರ್ಕಾರಿ ಶಾಲೆಗಳು ಹಾಗೂ ಗ್ರಾಮದ ಸುತ್ತ ಮುತ್ತ ಹಣ್ಣಿನ ಗಿಡಗಳು ಹಾಗೂ ಬಹುಉಪಯೋಗಿ ಗಿಡಗಳನ್ನು ಬೆಳೆಸಬೇಕು. ಸರ್ಕಾರಿ ಶಾಲೆಗಳಲ್ಲಿ ಓದಿ ಉನ್ನತ ಹುದ್ದೆಗಳಲ್ಲಿರುವ ಹಳೆಯ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಂದ ಶಾಲೆಗಳಿಗೆ ಅಗತ್ಯ ಸೌಲಭ್ಯಗಳನ್ನು ದೊರಕಿಸಿಕೊಳ್ಳುವ ಕೆಲಸ ಆಗಬೇಕು. ಇದರಿಂದ ಸರ್ಕಾರಿ ಶಾಲೆಗಳು ಅಭಿವೃದ್ಧಿಯಾಗುತ್ತವೆ ಎಂದು ಕಿವಿಮಾತು ಹೇಳಿದರು. 
 ಜಿಲ್ಲಾಧಿಕಾರಿಗಳಾದ ಜೆ. ಮಂಜುನಾಥ್ ಅವರು ಮಾತನಾಡಿ ಗುರು ಎಂದರೆ ಕತ್ತಲೆಯನ್ನು ಹೋಗಲಾಡಿಸುವುದು. ಈ ಗುರು ವೃತ್ತಿಗೆ ಮಹತ್ವವನ್ನು ತಂದು ಕೊಟ್ಟವರು ಸರ್ವಪಲ್ಲಿ ರಾಧಾಕೃಷ್ಣನ್‍ರವರು. ಇವರು ಸ್ವತಃ ಶಿಕ್ಷಕರಾಗಿ ಸೇವೆ ಸಲ್ಲಿಸಿ ದೇಶದ ಅತ್ಯುನ್ನತ ಹುದ್ದೆಯಾದ ರಾಷ್ಟ್ರಪತಿ ಹುದ್ದೆಯನ್ನು ಅಲಂಕರಿಸಿದ್ದರು. ಇವರ ಜನ್ಮದಿನವನ್ನು ಇಂದು ನಾವು ಶಿಕ್ಷಕರ ದಿನಾಚರಣೆಯಾಗಿ ಆಚರಿಸುತ್ತಿದ್ದೇವೆ ಎಂದು ತಿಳಿಸಿದರು. 
 ನರೇಗಾ ಯೋಜನೆಯಡಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಈ ವರ್ಷದ ಅಂತ್ಯದೊಳಗೆ ಕಾಂಪೌಂಡ್‍ಗಳನ್ನು ನಿರ್ಮಿಸಲಾಗುವುದು. ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ಶಿಕ್ಷಕರು ಗಮನ ಹರಿಸಬೇಕು. ಪ್ರಪಂಚದಲ್ಲಿ ಅತಿ ಹೆಚ್ಚು ಯುವಕರನ್ನು ಹೊಂದಿರುವ ದೇಶ ಭಾರತ. ಭಾರತೀಯರ ಸರಾಸರಿ ವಯಸ್ಸು 29 ವರ್ಷ ಇದೆ ಎಂದು ತಿಳಿಸಿದರು. 
 ವಿಧಾನಪರಿಷತ್ ಸದಸ್ಯರಾದ ವೈ.ಎ ನಾರಾಯಣಸ್ವಾಮಿ ಅವರು ಮಾತನಾಡಿ, ಗುರು ಇಲ್ಲದ ಸಮಾಜವನ್ನು ಊಹಿಸಿಕೊಳ್ಳಲು ಅಸಾಧ್ಯ. ಗುರು ತನ್ನನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಉತ್ತಮ ಸಮಾಜ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಾನೆ. ಇತ್ತೀಚಿನ ದಿನಗಳಲ್ಲಿ ಶಿಕ್ಷಕರ ಪ್ರಶಸ್ತಿಗೆ ಲಾಭಿ ನಡೆಯುತ್ತಿದ್ದು, ಇದು ನಿಲ್ಲಬೇಕು. ಮುಂದಿನ ದಿನಗಳಲ್ಲಿ ಎಲೆ ಮರಿ ಕಾಯಿಯಂತೆ ದುಡಿಯುತ್ತಿರುವ ಶಿಕ್ಷಕರನ್ನು ಪ್ರಶಸ್ಸಿಗೆ ಪರಿಗಣಿಸುವಂತೆ ಕಾನೂನು ರೂಪಿಸಲಾಗುವುದು. ಪ್ರಶಸ್ತಿಗೆ ಅರ್ಜಿ ಹಾಕುವ ಪದ್ದತಿಗೆ ಮುಕ್ತಿ ನೀಡಲಾಗುವುದು ಎಂದು ತಿಳಿಸಿದರು. 
 ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಶ್ರೀನಿವಾಸಗೌಡ ಅವರು ಮಾತನಾಡಿ, ಹಿಂದೆ ಶಿಕ್ಷಣ ಪಡೆಯಲು ಅವಕಾಶಗಳ ಹಾಗೂ ಸೌಲಭ್ಯಗಳು ತುಂಬಾ ಕಡಿಮೆ ಇದ್ದವು. ಸಾರಿಗೆ ಸೌಲಭ್ಯಗಳಿರಲಿಲ್ಲ. ಆದರೆ ಇಂದು ಶಿಕ್ಷಣ ಪಡೆಯಲು ವಿಫುಲ ಅವಕಾಶಗಳಿವೆ. ಆದ್ದರಿಂದ ಪ್ರತಿಯೊಬ್ಬರು ಉತ್ತಮ ಶಿಕ್ಷಣ ಪಡೆಯಬೇಕು. ಮಕ್ಕಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಬೇಕು. ಪಠ್ಯದ ಜೊತೆಗೆ ಸಹಪಠ್ಯ ಚಟುವಟಿಕೆಗಳಿಗೂ ಶಿಕ್ಷಕರು ಒತ್ತು ನೀಡಬೇಕು ಎಂದರು. 
 ಕಾರ್ಯಕ್ರಮದಲ್ಲಿ ಜಿಲ್ಲೆಯ ಉತ್ತಮ ಶಿಕ್ಷಕರ ಪ್ರಶಸ್ಸಿಗೆ ಭಾಜನರಾದ ಪ್ರಾಥಮಿಕ ಶಾಲಾ ಶಿಕ್ಷಕರು, ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಸನ್ಮಾನಿಸಲಾಯಿತು. ಈ ವರ್ಷದಲ್ಲಿ ನಿವೃತ್ತರಾದ ಶಿಕ್ಷಕರಿಗೂ ಸನ್ಮಾನಿಸಲಾಯಿತು. 
 ಸಮಾರಂಭದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಸೂಲೂರು ಎಂ.ಆಂಜಿನಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶ್ರೀಮತಿ ಶೈಲ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ನಾಗಾನಂದ ಕೆಂಪರಾಜು, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಅಶೋಕ್, ಖಾಸಗಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಎಸ್. ಮುನಿಯಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ನಾಗರಾಜಗೌಡ ಸೇರಿದಂತೆ ಶಿಕ್ಷಕರು ಉಪಸ್ಥಿತರಿದ್ದರು.