ಶ್ರೀನಿವಾಸಪುರ: ಸಾರ್ವಜನಿಕರಿಗೆ ಕೊರೋನಾ ವೈರಸ್‌ ಹರಡದಂತೆ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ತಿಳಿಸಬೇಕು ಎಂದು ತಹಶೀಲ್ದಾರ್ ಎಸ್‌.ಎಂ.ಶ್ರೀನಿವಾಸ್‌

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ
ಶ್ರೀನಿವಾಸಪುರ: ಸಾರ್ವಜನಿಕರಿಗೆ ಕೊರೋನಾ ವೈರಸ್‌ ಹರಡದಂತೆ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ತಿಳಿಸಬೇಕು ಎಂದು ತಹಶೀಲ್ದಾರ್ ಎಸ್‌.ಎಂ.ಶ್ರೀನಿವಾಸ್‌ ಹೇಳಿದರು.
  ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಕೊರೊನಾ ಜಾಗೃತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಂದಾಯ ಹಾಗೂ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ವಚ್ಛತೆ ಪಾಲಿಸುವಂತೆ ಸಾರ್ವಜನಿಕರಿಗೆ ತಿಳಿಸಬೇಕು.ಸಾರ್ವಜನಿಕರ ಹಿತದೃಷ್ಟಿಯಿಂದ ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿ ಒಂದು ವಾರ ಕಾಲ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಆದೇಶ ನೀಡಲಾಗುವುದು ಎಂದು ಹೇಳಿದರು.
  ಪೊಲೀಸ್‌ ಸರ್ಕಲ್‌ ಇನ್ಸ್‌ಪೆಕ್ಟರ್‌ ರಾಘವೇಂದ್ರ ಪ್ರಕಾಶ್‌ ಮಾತನಾಡಿ, ಜನರ ಆರೋಗ್ಯ ರಕ್ಷಣೆ ದೃಷ್ಟಿಯಿಂದ  ಸಾರ್ವಜನಿಕ ಸ್ಥಳಗಲ್ಲಿ ಸ್ವಚ್ಛತೆ ಕಾಪಾಡಬೇಕು. ಸಾರ್ವಜನಿಕರು ಕರೊನ ಹರಡುವಿಕೆ ತಡೆಯಲು ಗುಂಪುಗೂಡುವುದನ್ನು ಬಿಡಬೇಕು. ಧೂಮಪಾನ ಮಾಡಬಾರದು. ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
  ತಾಲ್ಲೂಕು ವೈದ್ಯಾಧಿಕಾರಿ ಡಾ.ವಿಜಯ ಮಾತನಾಡಿ, ಕೊರೊನಾ ಹರಡದಂತೆ ತಡೆಯಲು ಸಾರ್ವಜನಿಕರು ಮಾಸ್ಕ್ ಬಳಸಬೇಕು. ಮಾಸ್ಕನ್ನು 8 ಗಂಟೆಗಿಂತ ಹೆಚ್ಚು ಕಾಲ ಬಳಸಬಾರದು. ನಿಯಮಿತವಾಗಿ ಕೈ ತೊಳೆದು, ಬಟ್ಟೆ ಬದಲಿಸಬೇಕು ಎಂದು ಹೇಳಿದರು.
  ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್‌.ಆನಂದ್‌ ಮಾತನಾಡಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಿಡಿಒ ಮತ್ತು ಅವರ ಸಿಬ್ಬಂದಿ ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡಬೇಕು. ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡುವುದಕ್ಕೆ ಪೂರಕವಾಗಿ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು  ಎಂದು ಹೇಳಿದರು.
  ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್‌ ಕುಮಾರ್‌ ಮಾತನಾಡಿ, ಕೊರೊನಾ ತಡೆಗೆ ಅಗತ್ಯವಾದ ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಮುಖ್ಯವಾಗಿ ಪಟ್ಟಣದಲ್ಲಿ ಸ್ವಚ್ಛತೆಗೆ ವಿಶೇಷ ಗಮನ ನೀಡಲಾಗಿದೆ. ರೋಗ ಹರಡದಂತೆ ತಡೆಯಲು ಪೂರಕವಾಗಿ, ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.
  ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಡಾ. ಅರ್ಚನ, ಆರೋಗ್ಯ ನಿರೀಕ್ಷಕರಾದ ಕೆ.ಜಿ.ರಮೇಶ್‌, ಸುಬ್ರಮಣಿ ಇದ್ದರು.