ಶ್ರೀನಿವಾಸಪುರ: ಸಾಲ ಪಡೆದ ಫಲಾನುಭವಿಗಳು ನಿಗದಿತ ಅವಧಿಯೊಳಗೆ ಸಾಲ ಮರುಪಾವತಿ ಮಾಡಬೇಕು: ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಸಾಲ ಪಡೆದ ಫಲಾನುಭವಿಗಳು ನಿಗದಿತ ಅವಧಿಯೊಳಗೆ ಸಾಲ ಮರುಪಾವತಿ ಮಾಡಬೇಕು ಎಂದು ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಹೇಳಿದರು.
  ತಾಲ್ಲೂಕಿನ ರೋಣೂರು ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್‌ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಸಾಲ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಪೂರಕವಾಗಿ ಬಡ್ಡಿ ರಹಿತ ಸಾಲ ನೀಡಲಾಗುತ್ತಿದೆ. ಈ ಬಗ್ಗೆ ಕೆಲವರಿಂದ ಬರುವ ಟೀಕೆಗಳಿಗೆ ತಲೆ ಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ. ಸಾಲದ ಮಿತಿಯನ್ನು ರೂ. 50 ಸಾವಿರದಿಂದ 1ಲಕ್ಷಕ್ಕೆ ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.       

ಮುಂದಿನ ಗಣೇಶ ಚತುರ್ಥಿ ಒಳಗೆ ತಾಲ್ಲೂಕಿನ ಎಲ್ಲ ಕೆರೆಗಳಿಗೆ ಕೆಸಿ ವ್ಯಾಲಿಯಿಂದ ನೀರು ಹರಿಸಲಾಗುವುದು. ಗ್ರಾಮೀಣ ಪ್ರದೇಶದ ರೈತರು ಹಾಗೂ ಬಡವರ ಬದುಕು ಹಸನಾದಾಗ ಮಾತ್ರ ಸಮಾಜದಲ್ಲಿ ನೆಮ್ಮದಿ ಮೂಡಲು ಸಾಧ್ಯ. ಬಡವರ ಮಕ್ಕಳು ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದುವುದೇ ನಿಜವಾದ ಹಬ್ಬ ಎಂದು ಹೇಳಿದರು. 

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದ ಗೌಡ ಮಾತನಾಡಿ, ರೋಣೂರು ಹೋಬಳಿಯ 47 ಸ್ತ್ರೀ ಶಕ್ತಿ ಸಂಘಗಳಿಗೆ ರೂ.2.35 ಕೋಟಿ ಬಡ್ಡಿ ರಹಿತ ಸಾಲ ವಿತರಿಸಲಾಗುತ್ತಿದೆ. ಬಾಂಡ್‌ ಮೂಲಕ ಠೇವಣಿ ಇಡುವ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಮಹಿಳೆಯರಲ್ಲಿ ಉಳಿತಾಯ ಮನೋಭಾವ ಉಂಟಾಗುವುದು ಎಂದು ಹೇಳಿದರು.  ಈ ಸಂದರ್ಭದಲ್ಲಿ ಸ್ತ್ರೀ ಶಕ್ತಿ ಸಂಘದ ಸದಸ್ಯರಿಗೆ ಡಿಸಿಸಿ ಬ್ಯಾಂಕ್‌ ವತಿಯಿಂದ ಬಾಂಡ್‌ಗಳನ್ನು ವಿರಿಸಲಾಯಿತು.  ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ದಿಂಬಾಲ ಅಶೋಕ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಂಜಯರೆಡ್ಡಿ, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರೋಣುರು ಚಂದ್ರಶೇಖರ್‌, ಡಿಸಿಸಿ ಬ್ಯಾಂಕ್ ನಿರ್ದೇಶಕ ವೆಂಕಟರೆಡ್ಡಿ, ಸಿಇಒಗಳಾದ ಪ್ರಭಾಕರರೆಡ್ಡಿ, ಶಿವಾರೆಡ್ಡಿ, ವೀರಪ್ಪರೆಡ್ಡಿ, ಚಿಂತಾಮಣಿ ನಗರ ಸಭಾ ಸದಸ್ಯ ಜಗದೀಶ್‌ ಇದ್ದರು.