250 ಪ್ರಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ದರ್ಜೆಗೆ ಏರಿಸಲಾಗುವುದು : ಡಾ. ಕೆ.ಸುಧಾಕರ್

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: 250 ಪ್ರಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ದರ್ಜೆಗೆ ಏರಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಹೇಳಿದರು.
ತಾಲ್ಲೂಕಿನ ಬೈರಗಾನಪಲ್ಲಿ ಗ್ರಾಮದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಮೇಲ್ದರ್ಜೆಗೆ ಏರಿಸಲಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಥಮಿ ಚಿಕಿತ್ಸೆ ಮಾತ್ರವಲ್ಲದೆ, ಅಗತ್ಯ ಬಿದ್ದಾಗ ಶಸ್ತ್ರ ಚಿಕಿತ್ಸೆ ನಡೆಸುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ, ಬರಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಮಾಜಿ ಶಾಸಕ ಹಾಗೂ ಜಿಲ್ಲಾ ಜೆಡಿಎಸ್ ಘಟಕದ ಅಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ಅವರನ್ನು ಗೆಲ್ಲಿಸಿ ಎಂದು ಕ್ಷೇತ್ರದ ಮತದಾರರಿಗೆ ಕರೆ ಕೊಡುವುದರ ಮೂಲಕ ಬಿಜೆಪಿ ಮುಖಂಡರು ಹುಬ್ಬೇರಿಸುವಂತೆ ಮಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಮಾತನಾಡಿ, ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿ ಜಾರಿಗೆ ತರಲಾಗುವುದು. ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿ ಕೃಷಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಾಗುವುದು. ಅಭಿವೃದ್ಧಿಗೆ ಎಲ್ಲರು ಸಹಕರಿಸಬೇಕು. ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಿದರು.
ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ, ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಜಗದೀಶ್, ತಾಲ್ಲೂಕು ವೈದ್ಯಾಧಿಕಾರಿ ಡಾ. ಎಂ.ಸಿ.ವಿಜಯ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ, ರಾಜ್ಯ ಜನತಾದಳದ ಪ್ರಧಾನ ಕಾರ್ಯದರ್ಶಿ ಬಿ.ವಿ.ಶಿವಾರೆಡ್ಡಿ, ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್, ಮುಖಂಡರಾದ ತೂಪಲ್ಲಿ ಆರ್.ನಾರಾಯಣಸ್ವಾಮಿ, ಜಿ.ಕೆ.ನಾಗರಾಜ್, ಕುಂದಿಟಿವಾರಿಪಲ್ಲಿ ಶಿವಾರೆಡ್ಡಿ, ಎಂ.ಮಾರುತಿರೆಡ್ಡಿ, ಆನಂದ್, ಮನು, ಬಕ್ಷಿಸಾಬ್ ಇದ್ದರು.
ಉದ್ಘಾಟನೆ: ತಾಲ್ಲೂಕು ಪ್ರವಾಸ ಕೈಗೊಂಡ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಮುದವಾಡಿ ಹಾಗೂ ಲಕ್ಷ್ಮೀಸಾಗರ ಗ್ರಾಮಗಳಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಉದ್ಘಾಟಿಸಿದರು. ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಆರ್‍ಟಿಪಿಸಿಆರ್ ಲ್ಯಾಬ್ ಹಾಗೂ ಆಮ್ಲಜನಕ ಉತ್ಪಾದನಾ ಘಟಕವನ್ನು ಉದ್ಘಾಟಿಸಿದರು. ಕೊರೊನಾ ವಿರುದ್ಧ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಿದರು. ಗೌನಿಪಲ್ಲಿ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.