ಜನರು ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಅನುಕೂಲ :ಶಿರಸ್ತೇದಾರ್ ಮನೋಹರ ಮಾನೆ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಜನರು ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಅನುಕೂಲ ಪಡೆದುಕೊಳ್ಳಬೇಕು ಎಂದು ಶಿರಸ್ತೇದಾರ್ ಮನೋಹರ ಮಾನೆ ಹೇಳಿದರು.
ತಾಲ್ಲೂಕಿನ ಪಂದಿವಾರಿಪಲ್ಲಿ ಗ್ರಾಮದಲ್ಲಿ ಕಂದಾಯ ಇಲಾಖೆ ವತಿಯಿಂದ ಶನಿವಾರ ಏರ್ಪಡಿಸಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಆಯಾ ಗ್ರಾಮದ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ಸ್ಥಳದಲ್ಲಿಯೇ ವಿತರಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗೋವಿಂದಸ್ವಾಮಿ ಮಾತನಾಡಿ, ಅಧಿಕಾರಿಗಳು ಸರ್ಕಾರದ ಸೌಲಭ್ಯಗಳನ್ನು ಪಕ್ಷಾತೀತವಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು. ಜನರು ಕೆಲಸಗಳಿಗಾಗಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಬೇಕು. ಇಂಥ ಕಾರ್ಯಕ್ರಮಗಳಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಮಾತ್ರವಲ್ಲದೆ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸುವುದರಿಂದ ಹೆಚ್ಚಿನ ಪ್ರಯೋಜನವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು ಮುಂತಾದ ಮೂಲ ಸೌಕರ್ಯ ಒದಗಿಸಲು ಆದ್ಯತೆ ನೀಡಲಾಗಿದೆ. ಸರ್ಕಾರದ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ತಾಲ್ಲೂಕಿನಲ್ಲಿ ಕರೆಯಲು ಯೋಗ್ಯವಲ್ಲದ 15 ಗ್ರಾಮಗಳ ಹೆಸರುಗಳನ್ನು ಬದಲಾಯಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ 4 ಹಾಗೂ ತಾಲ್ಲೂಕು ಪಂಚಾಯಿತಿಗೆ ಸಂಬಂಧಿಸಿದ 6 ಅರ್ಜಿಗಳನ್ನು ಸ್ವೀಕರಿಸಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಲಿತಾ ರಾಮಲಿಂಗಾರೆಡ್ಡಿ, ಉಪಾಧ್ಯಕ್ಷ ಶ್ರೀನಿವಾಸ್, ಪಿಡಿಒ ಚಂದ್ರಶೇಖರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಂ.ಕೆ.ಹುಸೇನ್ ಸಾಬ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಎಂ.ಸಿ.ವಿಜಯ, ಸಿಡಿಪಿಒ ರೋಸಲಿನ್ ಸತ್ಯ, ಬಿಇಒ ವಿ.ಉಮಾದೇವಿ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಬಾಲಚಂದ್ರ, ಕೃಷ್ಣಪ್ಪ, ಜನಾರ್ಧನ್, ಸುರೇಶ್ ಬಾಬು, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ.ಕೆ.ಮಂಜುನಾಥರೆಡ್ಡಿ ಇದ್ದರು.