ಎಸ್‍ಎನ್‍ಆರ್ ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಿ ಉತ್ತಮ ಸೇವೆ ನೀಡಲು ಅಗತ್ಯ ಕ್ರಮಕೈಗೊಳ್ಳಿ- ರೈತಸಂಘ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಕೋಲಾರ: ಎಸ್‍ಎನ್‍ಆರ್ ಜಿಲ್ಲಾಸ್ಪತ್ರೆಯಲ್ಲಿನ ಅವ್ಯವಸ್ಥೆಗಳನ್ನು ಸರಿಪಡಿಸಿ ಜನರಿಗೆ ಉತ್ತಮ ಸೇವೆ ನೀಡಲು ಅಗತ್ಯ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ನೂತನ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಎನ್.ವಿಜಯ್‍ಕುಮಾರ್‍ಗೆ ರೈತಸಂಘದಿಂದ ಮನವಿ ಸಲ್ಲಿಸಲಾಯಿತು.
ನೂತನ ಜಿಲ್ಲಾ ಶಸ್ತ್ರಚಿಕಿತ್ಸಕರಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಸನ್ಮಾನಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಜಿಲ್ಲಾಸ್ಪತ್ರೆಯಲ್ಲಿ ಎಲ್ಲ ರೀತಿಯ ಸೌಲಭ್ಯಗಳಿಂದಲೂ ಸಿಬ್ಬಂದಿಯ ಬೇಜವಾಬ್ದಾರಿತನದಿಂದಾಗಿ ಜನರಿಗೆ ಸೂಕ್ತ ಸೇವೆ ಸಿಗದೆ ಅವ್ಯವಸ್ಥೆಯ ತಾಣವಾಗಿ ಮಾರ್ಪಟ್ಟಿದೆ ಎಂದು ಆರೋಪಿಸಿದರು.
ಆಸ್ಪತ್ರೆಯಲ್ಲಿ ದಲ್ಲಾಳಿಗಳ ಹಾವಳಿ ಮಿತಿ ಮೀರಿದ್ದು, ಪ್ರತಿಯೊಂದಕ್ಕೂ ಹೆಚ್ಚಿನ ಹಣ ನೀಡಿ ಪಡೆದುಕೊಳ್ಳಬೇಕಾದ ಅನಿವಾರ್ಯತೆಯಿದೆ. ಇನ್ನು ಆಸ್ಪತ್ರೆ ಆವರಣದಲ್ಲಿನ ಅಂಗಡಿಗಳು ನಿಯಮಗಳನ್ನು ಗಾಳಿಗೆ ತೂರಿ ವ್ಯಾಪಾರ ಮಾಡಿಕೊಳ್ಳುತ್ತಿದ್ದು, ಕೇಳುವವರು ಇಲ್ಲದಾಗಿದೆ.
ಸರ್ಕಾರಿ ಆಸ್ಪತ್ರೆಯಲ್ಲಿ ಆಂಬ್ಯುಲೆನ್ಸ್ ವಾಹನಗಳು ಇದ್ದರೂ ಖಾಸಗಿಯವರೊಂದಿಗೆ ಶಾಮೀಲಾಗಿ ಆ ವಾಹನಗಳನ್ನೇ ಹೆಚ್ಚಾಗಿ ಬಳಕೆ ಮಾಡುತ್ತಿರುವುದು ಸಾಮಾನ್ಯವಾಗಿದೆ. ಹೀಗಾಗಿ ನೂತನ ಜಿಲ್ಲಾ ಶಸ್ತ್ರಚಿಕಿತ್ಸಕರು ಈ ಬಗ್ಗೆ ಗಮನಹರಿಸಿ ಅವ್ಯವಹಾರಗಳಿಗೆ ಕಡಿವಾಣ ಹಾಕಿ ಬಡ ಜನರಿಗೆ ಉತ್ತಮ ಸೇವೆ ನೀಡಲು ಕ್ರಮಕೈಗೊಳ್ಳಬೇಕೆಂದು ಕೋರಿದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಎನ್.ವಿಜಯ್‍ಕುಮಾರ್ ಮಾತನಾಡಿ, ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮಕೈಗೊಂಡು ಜನರಿಗೆ ಉತ್ತಮ ಸೇವೆ ನೀಡಲಾಗುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ರೈತಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಜಿಲ್ಲಾಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್, ಕಾರ್ಯಾಧ್ಯಕ್ಷ ವಕ್ಕಲೇರಿ ಹನುಮಯ್ಯ, ತಾಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಮಂಗಸಂದ್ರ ತಿಮ್ಮಣ್ಣ, ಕುವ್ವಣ್ಣ, ಚಂದ್ರಪ್ಪ ಮತ್ತಿತರರಿದ್ದರು.