ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಬದುಕು ಕಟ್ಟಿಕೊಳ್ಳಬೇಕು : ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಬದುಕು ಕಟ್ಟಿಕೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ಹೇಳಿದರು.
ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಸ್ನೇಹ ಸಂಗಮ ಟ್ರಸ್ಟ್ ವತಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ್ದ ವಿದ್ಯಾರ್ಥಿಗಳಿಗೆ ಶನಿವಾರ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿ, ತಾಲ್ಲೂಕಿನಲ್ಲಿ ಉತ್ತಮ ಶೈಕ್ಷಣಿಕ ವಾತಾವರಣವಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕು ಜಿಲ್ಲೆಗೆ ಪ್ರಥಮ ಸ್ಥಾನದಲ್ಲಿದೆ. ಮುಂದಿನ ಪಬ್ಲಿಕ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಬರಬೇಕು ಎಂದು ಹೇಳಿದರು.
ಸರ್ಕಾರದ ಬೇರೆ ಬೇ
ರೆ ಅನುದಾನಗಳನ್ನು ಬಳಸಿಕೊಂಡು ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಲಾಗುವುದು. ಅಗತ್ಯ ಇರುವ ಕಡೆ ತರಗತಿ ಕೊಠಡಿಗಳ ನಿರ್ಮಾಣ, ಶುದ್ಧ ಕುಡಿಯುವ ನೀರು ಪೂರೈಕೆ, ಶಾಲಾ ಕಾಂಪೌಂಡ್ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಸ್ನೇಹ ಸಂಗಮ ಟ್ರಸ್ಟ್ ಅಧ್ಯಕ್ಷೆ ನಾಗವೇಣಿರೆಡ್ಡಿ ಮಾತನಾಡಿ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸು ಉದ್ದೇಶದಿಂದ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಗೆಳೆಯರ ಬಳಗದಿಂದ ಏರ್ಪಡಿಸಿರುವ ಈ ಕಾರ್ಯಕ್ರಮ ವಿದ್ಯಾರ್ಥಿಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರುವುದರಲ್ಲಿ ಸಂಶಯವಿಲ್ಲ ಎಂದು ಹೇಳಿದರು.
ಸಮಾರಂಭದಲ್ಲಿ 84 ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ನೆನೆಪಿನ ಕಾಣಿಕೆ ನೀಡಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ, ಪೊಲೀಸ್ ಸರ್ಕಲ್ ಇನ್ಸ್‍ಪೆಕ್ಟರ್ ಜೆ.ಜಿ.ನಾರಾಯಣಸ್ವಾಮಿ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ನಾಗರಾಜ್, ಮುಖ್ಯ ಶಿಕ್ಷಕ ಜಿ.ಮಂಜುನಾಥ್, ಮುಖಂಡರಾದ ಜಯರಾಂ, ಕೆ.ವಿ.ಸಿ.ರೆಡ್ಡಿ ಇದ್ದರು.