ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಪರಿಸರ ಪ್ರಜ್ಞೆ ಅನುಕರಣೀಯ ಎಂದು ತಹಶೀಲ್ದಾರ್ ಶರಿನ್ ತಾಜ್ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಸೋಮವಾರ ಏರ್ಪಡಿಸಿದ್ದ ಕೆಂಪೇಗೌಡರ 513ನೇ ಜಯಂತಿ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿ, ಮಹಾನ್ ವ್ಯಕ್ತಿಗಳ ಜಯಂತಿ ಸಮಾರಂಭದಲ್ಲಿ ಸಮಾಜದ ಎಲ್ಲ ಸಮುದಾಯದ ಜನರು ಭಾಗವಹಿಸಿದಾಗ ಸಂಭ್ರಮದ ವಾತಾವರಣ ನಿರ್ಮಾಣವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಭೈರವೇಶ್ವರ ವಿದ್ಯಾನಿಕೇತನದ ನಿರ್ದೇಶಕ ಎ.ವೆಂಕಟರೆಡ್ಡಿ ಮಾತನಾಡಿ, ಜಾತ್ಯಾತೀತರು ಹಾಗೂ ಲೋಕಹಿತ ಚಿಂತಕರಾಗಿದ್ದ ಕೆಂಪೇಗೌಡರನ್ನು, ಯಾವುದೇ ಒಂದು ಸಮುದಾಯಕ್ಕೆ ಸೀಮಿತಗೊಳಿಸುವುದು ಸರಿಯಲ್ಲ. ಜಾತಿಯ ವಿಷ ಬೀಜ ಬಿತ್ತುವ ವ್ಯಕ್ತಿಗಳ ಬಗ್ಗೆ ಸಮಾಜ ಎಚ್ಚರವಹಿಸಬೇಕು ಎಂದು ಹೇಳಿದರು.
ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ನೀಲಟೂರು ಚಿನ್ನಪ್ಪರೆಡ್ಡಿ ಮಾತನಾಡಿ, ತಾಲ್ಲೂಕು ಆಡಳಿತ ಒಕ್ಕಲಿಗ ಸಮುದಾಯದ ಬಳಕೆಗಾಗಿ ಸಮುದಾಯ ಭವನ ನಿರ್ಮಿಸಲು ಅಗತ್ಯವಾದ ಜಮೀನು ನೀಡಬೇಕು. ಒಕ್ಕಲಿಗರ ವಿದ್ಯಾರ್ಥಿ ನಿಲಯ ನಿರ್ಮಿಸಲು ನಿವೇಶನ ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.
ರೋಟರಿ ಶ್ರೀನಿವಾಸಪುರ ಸೆಂಟ್ರಲ್ ಅಧ್ಯಕ್ಷ ಡಾ. ವೈ.ವಿ.ವೆಂಕಟಾಚಲ ಕೆಂಪೇಗೌಡರ ಜೀವನ, ಸಾಧನೆ ಕುರಿತು ಮಾತನಾಡಿದರು.
ಪಟ್ಟಣದಲ್ಲಿ ಕೆಎಸ್‍ಆರ್‍ಟಿಸಿ ನೌಕರರ ಸಂಘದ ವತಿಯಿಂದ ಕೆಂಪೇಗೌಡರ ಪುತ್ಥಳಿ ಮೆರವಣಿಗೆ ಏರ್ಪಡಿಸಲಾಗಿತ್ತು. ಕೆಎಸ್‍ಆರ್‍ಟಿಸಿ ನೌಕರರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ, ಪೊಲೀಸ್ ಸರ್ಕಲ್ ಇನ್ಸ್‍ಪೆಕ್ಟರ್ ನಾರಾಯಣಸ್ವಾಮಿ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ನಾಗರಾಜ್, ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಎಂ.ಶ್ರೀನಿವಾಸನ್, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣಪ್ಪ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ತಾಲ್ಲೂಕು ಒಕ್ಕಳಿಗರ ಸಂಘದ ಖಜಾಂಚಿ ಚೊಕ್ಕರೆಡ್ಡಿ, ಮುಖಂಡ ಬೈರಾರೆಡ್ಡಿ, ತಾಲ್ಲೂಕು ಪಂಚಾಯಿತಿ ಕಚೇರಿ ವ್ಯವಸ್ಥಾಪಕ ರವಿಕುಮಾರ್, ವಲಯ ಅರಣ್ಯಾಧಿಕಾರಿಗಳಾದ ಸುರೇಶ್ ಬಾಬು, ಬಾಲಚಂದ್ರ, ಕೆಎಸ್‍ಆರ್‍ಟಿಸಿ ಅಧಿಕಾರಿ ಮುದುವಾಡಿ ಮಂಜುನಾಥ್ ಇದ್ದರು.