ಶ್ರೀನಿವಾಸಪುರ: ಶಾಂತಿಯುತ ಸಹಬಾಳ್ವೆಗೆ ಈ ನೆಲದ ಕಾನೂನು ಪಾಲಿಸಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗುರುವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಡಾ. ಬಿ.ಆರ್.ಅಂಬೇಡ್ಕರ್ ಅವರ ದೂರದೃಷ್ಟಿ ಹಾಗೂ ಪರಿಶ್ರಮದ ಫಲವಾಗಿ ದೇಶಕ್ಕೆ ಸಶಕ್ತ ಹಾಗೂ ಸರ್ವಮಾನ್ಯ ಸಂವಿಧಾನ ದೊರೆತಿದೆ. ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ವ್ಯವಸ್ಥೆಯಿಂದಾಗಿ ಮಾದರಿ ಆಡಳಿತ ವ್ಯವಸ್ಥೆ ರೂಪಗೊಂಡಿದೆ. ದೇಶ ಅಭಿವೃದ್ಧಿ ಪಥದಲ್ಲಿ ಸಾಗಲು ಸಹಾಯಕವಾಗಿದೆ ಎಂದು ಹೇಳಿದರು.
ಶಾಸಕ ಕೆ.ಆರ್.ರಮೇಶ್ ಕುಮಾರ್ ಗಣರಾಜ್ಯೋತ್ಸವ ಸಮಾರಂಭ ಉದ್ಘಾಟಿಸಿದರು. ಧ್ವಜ ವಂದನೆ ಸ್ವೀಕರಿಸಿದರು.
ತಾಲ್ಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರ ಪತ್ನಿಯರಾದ ವನಜಾಕ್ಷಮ್ಮ, ಲಕ್ಷ್ಮಮ್ಮ, ಪಾಪಮ್ಮ, ಕ್ರಿಷ್ಣಮ್ಮ ಅವರನ್ನು ಸನ್ಮಾನಿಸಲಾಯಿತು. ಕಳೆದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಿದ್ದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಪಥ ಸಂಚಲನ ಏರ್ಪಡಿಸಲಾಗಿತ್ತು. ಶಾಲಾ ಕಾಲೇಜು ವಿದ್ಯಾರ್ಥಿಗಳು ಆಕರ್ಷಕ ಸಾಂಸ್ಕøತಿ ಕಾರ್ಯಕ್ರಮ ನಡೆಸಿಕೊಟ್ಟರು.
ಉಪ ತಹಶೀಲ್ದಾರ್ ಕೆ.ಸಿ.ಜಯರಾಂ, ಶಿರಸ್ತೇದಾರರಾದ ಮನೋಹರ ಮಾನೆ, ಬಲರಾಮಚಂದ್ರೇಗೌಡ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ, ಎಪಿಎಂಸಿ ಕಾರ್ಯದರ್ಶಿ ಉಮಾ, ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್, ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ಕಂದಾಯ ಅಧಿಕಾರಿ ನಾಗರಾಜ್, ಉಪ ಪ್ರಾಂಶುಪಾಲ ಶ್ರೀಧರ್, ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ. ಮಂಜುನಾಥರೆಡ್ಡಿ, ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಎಂ.ಶ್ರೀನಿವಾಸನ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಜಿ.ಮಂಜುನಾಥ್, ಪೊಲೀಸ್ ಇನ್ಸ್ಪೆಕ್ಟರ್ ಜೆ.ಸಿ.ನಾರಾಯಣಸ್ವಾಮಿ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಎ.ಈಶ್ವರ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ನಾಗರಾಜ್, ವಿವಿಧ ಇಲಾಖೆ ಅಧಿಕಾರಿಗಳಾದ ರಾಮಪ್ಪ, ಮಂಜುನಾಥ್, ಸುಲೋಚನ, ವಸಂತ, ಸುಬ್ರಮಣಿ, ವೆಂಕಟರಮಣಪ್ಪ ಇದ್ದರು.