ಶ್ರೀನಿವಾಸಪುರ:ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟವಾಗಿರಬೇಕು ಅಧಿಕಾರಿಗಳು ಕಾಮಗಾರಿ ಸ್ಥಳಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಶೀಲಿಸಬೇಕು:ಕೆ.ಆರ್.ರಮೇಶ್ ಕುಮಾರ್

ಶ್ರೀನಿವಾಸಪುರ: ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟ ಸರಿಯಿರಬೇಕು. ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿ ನಡೆಯುವ ಸ್ಥಳಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ತಾಲ್ಲೂಕಿನ ಲಕ್ಷ್ಮೀಪುರ ಕ್ರಾಸ್ ಸಮೀಪ ಬುಧವಾರ ರೂ.19 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವ ನಾಡಕಚೇರಿ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ನಿರ್ಮಾಣ ಕಾಮಗಾರಿ ನಿರ್ಮಿತಿ ಕೇಂದ್ರದಿಂದ ನಡೆಯುತ್ತಿದೆ. ಅವರಿಂದ ಉತ್ತಮ ಗುಣಮಟ್ಟದ ಕಾಮಗಾರಿ ನಿರೀಕ್ಷಿಸಲಾಗಿದೆ ಎಂದು ಹೇಳಿದರು.
ಕ್ಷೇತ್ರದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶದಲ್ಲಿ ಮೂಲ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಾಗಿದೆ. ಬೇಸಿಗೆಯಲ್ಲಿ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಎಚ್ಚರ ವಹಿಸಲಾಗಿದೆ. ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಶೀಘ್ರವಾಗಿ ನಿವಾರಿಸಲಾಗುವುದು ಎಂದು ಹೇಳಿದರು.
ತಹಶೀಲ್ದಾರ್ ಶಿರಿನ್ ತಾಜ್ ಮಾತನಾಡಿ, ಸರ್ಕಾರಿ ಜಮೀನು ಲಭ್ಯವಿಲ್ಲದ ಪರಿಣಾಮವಾಗಿ, ನಾಡಕಚೇರಿ ಕಟ್ಟಡ ನಿರ್ಮಾಣ ಕಾರ್ಯ ತಡವಾಯಿತು. ಆದರೆ ದಾನಿಗಳಾದ ಬಾಬೂರೆಡ್ಡಿ ಹಾಗೂ ರಮಣಾರೆಡ್ಡಿ ಕಟ್ಟಡ ನಿರ್ಮಾಣಕ್ಕೆ ಅಗತ್ಯವಾ ಜಮೀನು ದಾನವಾಗಿ ನೀಡಿದ್ದರಿಂದಾಗಿ ನಿರ್ಮಾಣ ಕಾಮಗಾರಿ ಪ್ರಾರಂಭಿಸಲಾಗಿದೆ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೌತಮಿ ಮುನಿರಾಜು, ಕೋಚಿಮುಲ್ ಮಾಜಿ ಅಧ್ಯಕ್ಷ ವೆಂಕಟಶಿವಾರೆಡ್ಡಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ.ಕೆ.ಮಂಜುನಾಥರೆಡ್ಡಿ, ಮುಖಂಡರಾದ ಬಾಬುರೆಡ್ಡಿ, ರಮಣಾರೆಡ್ಡಿ ಇದ್ದರು.