ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು:ಆನಂದ ಸುವರ್ಣ

ಶ್ರೀನಿವಾಸಪುರ: ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಹೇಳಿದರು.
ಪಟ್ಟಣದ ಕನಕ ಸಮುದಾಯ ಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ಸುಜ್ಞಾನ ನಿಧಿ ಶಿಷ್ಯವೇತನ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಈವರೆಗೆ 47 ಸಾವಿರ ವಿದ್ಯಾರ್ಥಿಗಳಿಗೆ ರೂ.60 ಕೋಟಿ ಸುಜ್ಞಾನ ನಿಧಿ ಶಿಷ್ಯ ವೇತನ ನೀಡಲಾಗಿದೆ. ತಾಲ್ಲೂಕಿನಲ್ಲಿ ವೃತ್ತಿ ಶಿಕ್ಷಣ ಹಾಗೂ ತಾಂತ್ರಿಕ ಶಿಕ್ಷಣ ಪಡೆಯುತ್ತಿರುವ 187 ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಮಂಜೂರಾಗಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೂಪಲ್ಲಿ ಆರ್.ನಾರಾಯಣಸ್ವಾಮಿ ಮಾತನಾಡಿ, ಒಂದು ಸರ್ಕಾರ ಮಾಡುವಂಥ ಅಭಿವೃದ್ಧಿ ಕೆಲಸವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಮಾಡುತ್ತಿದ್ದಾರೆ. ಅವರ ಪಾರದರ್ಶಕ ಹಾಗೂ ಸಮಾಜ ಮುಖಿ ಚಟುವಟಿಕೆ ದೇಶಕ್ಕೆ ಮಾದರಿಯಾಗಿದೆ. ಫಲಾನುಭವಿಗಳು ಸೌಲಭ್ಯ ಸದುಪಯೋಗ ಪಡಿಸಿಕೊಂಡು ಅಭಿವೃದ್ಧಿ ಪಥದಲ್ಲಿ ಸಾಗಬೇಕು ಎಂದು ಹೇಳಿದರು.
ಭೈರವೇಶ್ವರ ವಿದ್ಯಾನಿಕೇತನದ ನಿರ್ದೇಶಕ ಎ.ವೆಂಕಟರೆಡ್ಡಿ, ತಾಲ್ಲೂಕು ದಾಸ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಮಾಯಾ ಬಾಲಚಂದ್ರ ಮಾತನಾಡಿದರು. ಪೋಷಕರೊಂದಿಗೆ ಆಗಮಿಸಿದ್ದ 187 ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯ ವೇತನದ ಮಂಜೂರಾತಿ ಪತ್ರ ವಿತರಿಸಲಾಯಿತು.
ಯೋಜನೆ ಜಿಲ್ಲಾ ನಿರ್ದೇಶಕ ಪದ್ಮಯ್ಯ, ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಗೊಪಾಲಕೃಷ್ಣ, ಪುಷ್ಪರಾಜ್ ಇದ್ದರು.