ಅರ್ಹ ಮಹಿಳೆಯರು ಯೋಜನೆ ಲಾಭ ಪಡೆದುಕೊಳ್ಳಬೇಕು -ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ

ಶ್ರೀನಿವಾಸಪುರ: ಅರ್ಹ ಮಹಿಳೆಯರು ಯೋಜನೆ ಲಾಭ ಪಡೆದುಕೊಳ್ಳಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಶನಿವಾರ ಏರ್ಪಡಿಸಿದ್ದ ಗೃಹಲಕ್ಷ್ಮಿ ಯೋಜನೆ ಉದ್ಘಾಟಿಸಿ ಮಾತನಾಡಿ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು ಎಂದು ಹೇಳಿದರು.
ವಿವಿಧ ಇಲಾಖೆಗಳ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಯಾವುದೇ ಕಾರಣಕ್ಕೂ ಯೋಜನೆ ದುರುಪಯೋಗ ನಡೆಯದಂತೆ ನೋಡಿಕೊಳ್ಳಬೇಕು. ಯೋಜನೆ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಬೇಕು ಎಂದು ಹೇಳಿದರು.
ಗ್ರಾಮ 1ರಲ್ಲಿ 750ಕ್ಕೂ ಹೆಚ್ಚು ಸೌಲಭ್ಯಗಳಿವೆ. ಹಾಗಾಗಿ ಯಾವ ಸೌಲಭ್ಯ ಯಾವ ಫಲಾನುಭವಿಗೆ ಸಿಗುತ್ತದೆ ಎನ್ನುವುದರ ಬಗ್ಗೆ ಮಾಹಿತಿ ನೀಡಬೇಕು. ಯಾವುದೇ ಫಲಾನುಭವಿ ಸೌಲಭ್ಯದಿಂದ ವಂಚಿತವಾಗದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು.
ತಹಶೀಲ್ದಾರ್ ಶಿರಿನ್ ತಾಜ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ತೂಪಲ್ಲಿ ಆರ್.ನಾರಾಯಣಸ್ವಾಮಿ, ಜಿ.ರಾಜಣ್ಣ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಗೊಟ್ಟುಕುಂಟ ಕೃಷ್ಣಾರೆಡ್ಡಿ, ಮಖಂಡ ಶೇಷಾಪುರ ಗೋಪಾಲ್ ಇದ್ದರು.