ಮಂಗಳೂರು ನಗರದ ಕಪಿತಾನಿಯೊ ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರು ಪೊಲೀಸರ ಮೇಲೆ ಹಲ್ಲೆ ನಡೆಸಲು ಪ್ರಯತ್ನಿಸಿದ ಘಟನೆ ನಡೆದಿದೆ.ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಮತ ಚಲಾಯಿಸಿ ಹೊರಗೆ ಬಂದ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಪದ್ಮರಾಜ್ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಮಾಧ್ಯಮದವರನ್ನು ಮತ್ತು ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು ಎನ್ನಲಾಗಿದೆ. ಸಂದೀಪ್ ಎಕ್ಕೂರು ಎಂಬಾತ ಎಷ್ಟು ಹೊತ್ತು ಪ್ರತಿಕ್ರಿಯೆ ನೀಡ್ತೀರಾ ಅಂತ ಪ್ರಶ್ನಿಸಿದ್ದಾನೆ. ಈ ವೇಳೆ ಆತನನ್ನು ಸ್ಥಳದಲ್ಲಿದ್ದ ಇನ್ಸ್ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಪೊಲೀಸರು ತಳ್ಳಿಕೊಂಡು ಸ್ವಲ್ಪ ದೂರ ಹೋಗಿದ್ದಾರೆ.ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ಪೆಕ್ಟರ್ ಇನ್ನೊಮ್ಮೆ ಈ ಪರಿಸರದಲ್ಲಿ ಕಂಡರೆ ಜಾಗ್ರತೆ ಎಂದು ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಪೊಲೀಸರು ಅಲ್ಲಿಂದ ಹಿಂದುರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮದ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಸ್ಥಳದಲ್ಲಿ ಕೊಂಚ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.ಹೀಗಾಗಿ ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಅಧಿಕಾರಿ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.