

ಶ್ರೀನಿವಾಸಪುರ: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಬೇಕು. ಸರ್ಕಾರದ ಸೌಲಭ್ಯಗಳು ಪಕ್ಷಾತೀತವಾಗಿ ಅರ್ಹ ಫಲಾನುಭವಿಗಳಿಗೆ ಸಿಗುವಂತ ನೋಡಿಕೊಳ್ಳಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಸತಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮನೆ ನೀಡುವಲ್ಲಿ ಗುಡಿಸಲು ವಾಸಿಗಳು ಹಾಗೂ ವಾಸಿಸಲು ಯೋಗ್ಯವಲ್ಲದ ಮನೆಗಳಲ್ಲಿ ವಾಸಿಸುತ್ತಿರವ ಕುಟುಂಬಗಳಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು.
ಕ್ಷೇತ್ರದ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸಬೇಕು. ನೀರು ಪೂರೈಕೆಗೆ ಏನಾದರೂ ಸಮಸ್ಯೆ ಇದ್ದಲ್ಲಿ ಅಧಿಕಾರಿಗಳ ಮಟ್ಟದಲ್ಲಿ ಸಮಸ್ಯೆ ಪರಿಹರಿಸಬೇಕು. ಅಗತ್ಯ ಇದ್ದಲ್ಲಿ ನನ್ನ ಗಮನಕ್ಕೆ ತರಬೇಕು. ಅಧಿಕಾರಿಗಳು ಖುದ್ದಾಗಿ ಗ್ರಾಮಗಳಿಗೆ ಭೇಟಿ ನೀಡಿ ಸಮಸ್ಯೆ ನಿವಾರಿಸಬೇಕು ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರ ಕೃಷ್ಣಪ್ಪ, ಕಾರ್ಯಪಾಲಕ ಸಹಾಯಕ ಎಂಜಿನಿಯರ್ ನಾರಾಯಣಸ್ವಾಮಿ, ಸಹಾಯಕ ನಿರ್ದೇಶಕ ರಾಮಪ್ಪ ಇದ್ದರು.