ಮಾವು ಬೆಳೆಗಾರರಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಪರಿಹಾರ ನೀಡುವಂತೆ ಆಗ್ರಹಿಸಿ ಪಟ್ಟಣದಲ್ಲಿ ಬಂದ್ ಆಚರಣೆ

ಶ್ರೀನಿವಾಸಪುರ: ಮಾವು ಬೆಳೆಗಾರರಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಪರಿಹಾರ ನೀಡುವಂತೆ ಆಗ್ರಹಿಸಿ ಪಟ್ಟಣದಲ್ಲಿ ಸಂಪೂರ್ಣ ಶಾಂತಿಯುತ ಬಂದ್ ಆಚರಿಸಲಾಯಿತು.
ಜಿಲ್ಲಾ ಮಾವು ಬೆಳೆಗಾರರ ಸಂಯುಕ್ತ ಹೋರಾಟ ಸಮಿತಿ ನೀಡಿದ್ದ ಬಂದ್ ಪ್ರಯುಕ್ತ ಶ್ರೀನಿವಾಸಪುರದಲ್ಲಿ ಅಂಗಡಿ ಮುಂಗಟ್ಟು ಮುಚ್ಚಲಾಗಿತ್ತು. ವಾಹನ ಸಂಚಾರ ಸ್ಥಗಿತಗೊಂಡಿತ್ತು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣ ಬಸ್‍ಗಳಿಲ್ಲದೆ ಬಿಕೋ ಎನ್ನುತ್ತಿತ್ತು. ಸರ್ಕಾರಿ ಕಚೇರಿಗಳು ಹಾಗೂ ಬ್ಯಾಂಕ್‍ಗಳು ತೆರೆದಿದ್ದವಾದರೂ ಜನರಿಲ್ಲದೆ ಬಿಕೋ ಎನ್ನುತ್ತಿದ್ದವು. ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆಯಿತ್ತು.
ಜಿಲ್ಲಾ ಮಾವು ಬೆಳೆಗಾರರ ಸಂಯುಕ್ತ ಹೋರಾಟ ಸಮಿತಿ ಸದಸ್ಯರು, ವಿವಿಧ ರೈತ ಸಂಘಟನೆಗಳ ಕಾರ್ಯಕರ್ತರು ಹಾಗೂ ಮಾವು ಬೆಳೆಗಾರರು ಪಟ್ಟಣದ ಎಂಜಿ ರಸ್ತೆಯಲ್ಲಿ ಮೆರವಣಿಗೆ ನಡೆಸಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿಮೆ ಮಾಡಿಸಿಕೊಂಡಿರು ಕಂಪನಿ ವಿರುದ್ಧ ಘೋಷಣೆ ಕೂಗಿದರು. ಬಸ್ ನಿಲ್ದಾಣದ ಮುಂದಿನ ರಸ್ತೆಗೆ ಅಡ್ಡಲಾಗಿ ನಿಂತು ರಸ್ತೆ ತಡೆ ನಡೆಸಿದರು.
ಎಂಜಿ ರಸ್ತೆಯಲ್ಲಿ ಪ್ರತಿಭಟನಕಾರರನ್ನು ಉದ್ದೇಶಿಸಿ ಜಿಲ್ಲಾ ಮಾವು ಬೆಳೆಗಾರರ ಸಂಘದ ಅಧ್ಯಕ್ಷ ನೀಲಟೂರು ಚಿನ್ನಪ್ಪರೆಡ್ಡಿ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ,ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪಾತಕೋಟ ನವೀನ್ ಕುಮಾರ್ ಮಾತನಾಡಿ ಬೆಳೆ ನಷ್ಟ ಅನುಭವಿಸಿರುವ ಮಾವು ಬೆಳೆಗಾರರಿಗೆ ಫಸಲು ಬಿಮಾ ಯೋಜನೆ ಪರಿಹಾರ ಕೊಡಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.
ಜಿಲ್ಲಾ ಮಾವು ಬೆಳೆಗಾರರ ಸಂಯುಕ್ತ ಹೋರಾಟ ಸಮಿತಿ ಮುಖಂಡರು ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ತಹಶೀಲ್ದಾರ್ ಶಿರಿನ್ ತಾಜ್ ಅವರಿಗೆ ನೀಡದರು.
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ನಂಬಿಹಳ್ಳಿ ಶ್ರೀರಾಮರೆಡ್ಡಿ, ವಿವಿಧ ರೈತ ಸಂಘಟನೆಗಳ ಮುಖಂಡರಾದ ಸುಬ್ರಮಣಿ, ನರಸಿಂಹಯ್ಯ, ವೇಣು, ಸೈಯದ್ ಫಾರೂಕ್, ಸೈಯದ್ ಅಕ್ಬರ್ ಪಾಷ, ಇಮ್ರಾನ್ ಖಾನ್, ಮಂಜುಳ, ವೆಂಕಟಲಕ್ಷ್ಮಮ್ಮ, ಶಿವರಾಜು, ಆಂಜಿಲಪ್ಪ ಪ್ರತಿಭಟನೆ ನೇತೃತ್ವ ವಹಿಸಿದ್ದರು.