ಬೆಂಗಳೂರು,ಆಗಸ್ಟ್ 7 : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಉತ್ತರ ಒಳನಾಡು, ದಕ್ಷಿಣ ಒಳನಾಡು, ಕಾರವಳಿ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಬೆಳಗಾವಿ, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಆಗಸ್ಟ್ ತಿಂಗಳಿನಲ್ಲಿ ರಾಜ್ಯದಲ್ಲಿ ವಾಡಿಕೆಯಂತೆ 22 ಸೆಂ.ಮೀ ಮಳೆಯಾಗಬೇಕು. ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ಆಗಸ್ಟ್ ತಿಂಗಳಲ್ಲಿ 82 ಸೆಂ.ಮೀ ಮಳೆಯಾಗುವ ನಿರೀಕ್ಷೆಯಿದೆ. ಟ್ರಫ್ ಅಥವಾ ವಾಯುಭಾರ ಕುಸಿತ ಉಂಟಾದರೆ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತದೆ. ಉತ್ತರ ಒಳನಾಡಿನಲ್ಲಿ 12 ಸೆಂ.ಮೀ ಮಳೆಯಾಗಬೇಕು. ಆದರೆ ನೀರಿಕ್ಷೆಗೂ ಮೀರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.