

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ಉತ್ತರ ವಲಯ ಹಾಗೂ ಸಂತ ಆನ್ಸ್ ಪ್ರೌಢಶಾಲೆ, ಬೋಳಾರ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ 2026/2027 ನೇ ಸಾಲಿನ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ಚದುರಂಗ ಪಂದ್ಯಾಟದ ಉದ್ಘಾಟನಾ ಸಮಾರಂಭವು ಸಂತ ಆನ್ಸ್ ಪ್ರೌಢಶಾಲೆಯ ಸಭಾಭವನದಲ್ಲಿ ವಿಜೃಂಭಣೆಯಿಂದ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ಆನ್ಸ್ ಸಮೂಹ ವಿದ್ಯಾ ಸಂಸ್ಥೆಗಳ ಜಂಟಿ ಕಾರ್ಯದರ್ಶಿಗಳಾದ ಭಗಿನಿ ಮಾರಿ ಇವ್ಲಿನ್ ಎ.ಸಿ. ವಹಿಸಿದ್ದರು. ಮಂಗಳೂರು ಉತ್ತರ ವಲಯದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀ ಜೀವನ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಬಳಿಕ ವೇದಿಕೆಯಲ್ಲಿದ್ದ ಗಣ್ಯರು ದೀಪ ಪ್ರಜ್ವಲನೆ ಮಾಡುವ ಮೂಲಕ ಚದುರಂಗ ಪಂದ್ಯಾಟವನ್ನು ಉದ್ಘಾಟಿಸಿದರು. ನಂತರ ವಿದ್ಯಾರ್ಥಿಗಳು ಚದುರಂಗ ಆಟವನ್ನು ಸಾಂಕೇತಿಕ ವಾಗಿ ಆಡಿ. ಪಂದ್ಯಾಟಕ್ಕೆ ಚಾಲನೆ ನೀಡಿದರು.
ವೇದಿಕೆಯಲ್ಲಿ ತಾಲ್ಲೂಕು ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷರಾದ ಶ್ರೀ ನಿತಿನ್ ಆರ್. ಪುತ್ರನ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ಹರೀಶ್ ರೈ, ಗ್ರೇಡ್–1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀಮತಿ ಚೆಲುವಮ್ಮ, ಸಂತ ಆನ್ಸ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಭಗಿನಿ ಅನೆಟ್ ಎ.ಸಿ, ಸಂತ ಅನ್ನರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಭಗಿನಿ ರೋಸ್ಮಿಟ ಎ.ಸಿ., ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ಮಹಮ್ಮದ್ ಕಾಸಿಂ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಶಿಕ್ಷಕಿ ವೀಣಾ ಲೋಬೋ ಅವರು ನಿರೂಪಿಸಿದರು. ಮುಖ್ಯ ಶಿಕ್ಷಕಿ ಭಗಿನಿ ಅನೆಟ್ ಎ. ಸಿ . ಯವರು ಸ್ವಾಗತಿಸಿದರು. ಶಿಕ್ಷಕಿ ಸಾರ ನತಾಶಾ ವಂದನಾರ್ಪಣೆ ಸಲ್ಲಿಸಿದರು.
ತಾಲೂಕಿನ ವಿವಿಧ ಶಾಲೆಗಳಿಂದ ಆಗಮಿಸಿದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಯಲ್ಲಿ ಭಾಗವಹಿಸಿದರು.















