ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ರಾಜ್ಯ ಬಜೆಟ್ನಲ್ಲಿ ಕೋಲಾರ ಜಿಲ್ಲೆಯನ್ನು ಕಡೆಗಣಿಸಿರುವುದನ್ನು ಪ್ರತಿಭಟಿಸಿ ರಸ್ತೆ ತಡೆ ನಡೆಸಿದರು. ಇದರಿಂದ ಎಂಜಿ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ಪರದಾಡಿದರು.
ಕರ್ನಾಟಕ ಪ್ರಾಂತ ರೈತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಈ ಸಂದರ್ಭದಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಕೋಲಾರ ಜಿಲ್ಲೆ ಅಭಿವೃದ್ಧಿ ವಿಚಾರದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಶುಕ್ರವಾರ ಮಂಡಿಸಲಾಗಿರುವ ಬಜೆಟ್ನಲ್ಲಿ ಜಿಲ್ಲೆಯನ್ನು ಸಂಪೂರ್ಣ ಕಡೆಗಣಿಸಲಾಗಿದೆ ಎಂದು ಹೇಳಿದರು.
ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಪಾತಕೋಟ ನವೀನ್ ಕುಮಾರ್ ಮಾತನಾಡಿ, ಜಿಲ್ಲೆಗೆ ಸಂಬಂಧಿಸಿದಂತೆ ಶಾಶ್ವತ ನೀರಾವರಿ ಯೋಜನೆಗೆ ಗಮನ ನೀಡಲಾಗಿಲ್ಲ. ಕೃಷಿಕರ ಹಿತ ಕಾಯಲು ಸಮಗ್ರ ನೀರಾವರಿ ಯೋಜನೆ ಜಾರಿ ಸಾಧ್ಯವಾಗಿಲ್ಲ. ಕೃಷ್ಣಾ ನದಿಯಿಂದ ಸಿಗಬೇಕಾಗಿರುವ 47 ಟಿಎಂಸಿ ನೀರಿನ ಪಾಲನ್ನು ಕೇಳಲಾಗಿತ್ತು. ಆ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಕೆಸಿ ವ್ಯಾಲಿ ನೀರನ್ನು ಮೂರನೇ ಹಂತದಲ್ಲಿ ಸಂಸ್ಕರಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ ಬಜೆಟ್ನಲ್ಲಿ ಅದರ ಪ್ರಸ್ತಾಪವೇ ಇಲ್ಲ ಎಂದು ಹೇಳಿದರು.
ಮುಖಂಡರಾದ ಎಸ್.ಎಂ.ನಾಗರಾಜ್, ಆರ್.ವೆಂಕಟೇಶ್, ಜಿ.ಮಂಜುಳ, ಸುಮತಿ, ನರಾಯಣಪ್ಪ, ನಾಗೇಶ್ ಇದ್ದರು.