

ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆ, ಉರ್ವದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಗೌರವಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮವು ಪ್ರಾರ್ಥನಾ ವಿಧಿಯೊಂದಿಗೆ ಆರಂಭಗೊಂಡು, ದೀಪ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು. ಬಳಿಕ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀಮತಿ ಶೈಲಾಶ್ರೀ ಹಾಗೂ ಹಿರಿಯ ಶಿಕ್ಷಕಿಯರಾದ ಲವೀನಾ ಡಿಕುನ್ನ ಮತ್ತು ಲವೀನಾ ಪಿಂಟೊ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕರಾದ ಶ್ರೀ ಅಲೋಶಿಯಸ್ ಡಿಸೋಜ ಅವರು ಗಾಂಧೀಜಿಯವರ ಸತ್ಯ ಮತ್ತು ಅಹಿಂಸೆಯ ಮೌಲ್ಯಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವ ಮಹತ್ವವನ್ನು ತಿಳಿಸಿ, ದಿನದ ಮಹತ್ವವನ್ನು ವಿವರಿಸಿದರು.
ವಿದ್ಯಾರ್ಥಿಗಳು ಆಶಯ ಗೀತೆ ಹಾಗೂ ನೃತ್ಯದ ಮೂಲಕ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಆದರ್ಶಗಳು ಹಾಗೂ ಅವರ ಜೀವನ ಸಂದೇಶಗಳನ್ನು ಸುಂದರವಾಗಿ ಪ್ರಸ್ತುತಪಡಿಸಿದರು. ಪೂರ್ವಿ ಕಾರ್ಯಕ್ರಮವನ್ನು ನಿರೂಪಿಸಿದರು. ಚಿನ್ಮಯಿ ಸ್ವಾಗತಿಸಿದರು ಹಾಗೂ ಹನ್ನಾ ವಂದನಾರ್ಪಣೆ ಸಲ್ಲಿಸಿದರು.
ಏಳನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸಂಯೋಜಿಸಿದ ಈ ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳೊಂದಿಗೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು.





























