ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಗ್ರಾಮೀಣ ಪ್ರದೇಶದ ನಾಗರಿಕರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಯಾವುದೇ ರೋಗ ರುಜಿನ ಬರದಂತೆ ಎಚ್ಚರ ವಹಿಸಬೇಕು ಎಂದು ಕೊಳತೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೆಹರ್ ತಾಜ್ ಹೇಳಿದರು.
ತಾಲ್ಲೂಕಿನ ಕೊಳತೂರು ಗ್ರಾಮದ, ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಗ್ರಾಮದ ಮನೆ ಮನೆಗೆ ಕಸದ ಬುಟ್ಟಿ ವಿತರಿಸಿ ಮಾತನಾಡಿ, ನಗರ ಪ್ರದೇಶದಲ್ಲಿ ಕಸ ನಿರ್ವಹಣೆ ಮಾಡುವಂತೆ ಗ್ರಾಮೀಣ ಪ್ರದೇಶದಲ್ಲೂ ಮಾಡಬೇಕು. ಒಣ ಹಾಗೂ ಹಸಿ ಕಸವನ್ನು ಬೇರ್ಪಡಿಸಿ ಸಂಸ್ಕರಣೆಗೆ ನೀಡಬೇಕು. ಅದರಿಂದ ಪರಿಸರ ಮಾಲಿನ್ಯ ಪ್ರಮಾಣ ಕಡಿಮೆಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ವಿವಿಧ ಯೋಜನೆಗಳ ಫಲಾನುಭವಿಗಳು ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಬೇಕು. ಕೋವಿಡ್ ನಿಯಂತ್ರಣಕ್ಕೆ ಪೂರಕವಾದ ಜೀವನ ವಿಧಾನ ರೂಪಿಸಿಕೊಳ್ಳಬೇಕು. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಅಂಗವಿಕಲರಿಗೆ ಸಹಾಯ ಧನದ ಚೆಕ್ ವಿತರಿಸಲಾಯಿತು.