

ಕೋಲಾರ, ಮೇ ೧೩: ಮೇ ೩ರಂದು ನಡೆದ ನೀಟ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಅತ್ಯಂತ ಗಂಭೀರ ವಿಚಾರವಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿರುವ ಕೇಂದ್ರ ಸರ್ಕಾರದ ವೈಫಲ್ಯವನ್ನು ಖಂಡಿಸಿ ಕೇಂದ್ರ ಉನ್ನತ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಅವರು ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷ ಎಸ್. ಮಂಜುನಾಥ್ ಆಗ್ರಹಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಸರ್ಕಾರದ ವೈಫಲ್ಯ ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಆರೋಪಿಸಿದರು.
ವಿದ್ಯಾರ್ಥಿಗಳು ಬಹಳ ಕಷ್ಟಪಟ್ಟು ಪರೀಕ್ಷೆಗೆ ಸಿದ್ಧತೆ ನಡೆಸಿ ಪರೀಕ್ಷೆ ಬರೆದಿರುತ್ತಾರೆ. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಕನಸು ನುಚ್ಚುನೂರಾಗಿದ್ದು, ಮತ್ತೆ ಪರೀಕ್ಷೆ ಬರೆದು ಭವಿಷ್ಯ ರೂಪಿಸಿಕೊಳ್ಳುವ ದುಸ್ಥಿತಿ ಎದುರಾಗಿದೆ ಎಂದು ವಿಷಾದಿಸಿದರು.
ಪರೀಕ್ಷಾ ಕೇಂದ್ರಗಳಿಗೆ ದೂರದ ಊರುಗಳಿಂದ ಆಗಮಿಸಿರುವ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರವು ತಲಾ ₹೧೦೦೦ ಪರಿಹಾರ ನೀಡಬೇಕು. ಜೊತೆಗೆ ಮುಂದಿನ ದಿನಗಳಲ್ಲಿ ಅತ್ಯಂತ ಪಾರದರ್ಶಕ ಹಾಗೂ ಸುಸಜ್ಜಿತ ರೀತಿಯಲ್ಲಿ ನೀಟ್ ಪರೀಕ್ಷೆ ನಡೆಸುವಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿರುವ ಅಪರಾಧಿಗಳನ್ನು ನಿರ್ದಾಕ್ಷಿಣ್ಯವಾಗಿ ಶಿಕ್ಷೆಗೆ ಒಳಪಡಿಸಬೇಕು. ಮುಂದೆಯೂ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡದಂತೆ ಕಟ್ಟುನಿಟ್ಟಿನ ಸಂದೇಶವನ್ನು ಸರ್ಕಾರ ನೀಡಬೇಕಾಗಿದೆ ಎಂದು ಹೇಳಿದರು.
ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಎಸ್. ಮಂಜುನಾಥ್ ತಿಳಿಸಿದ್ದಾರೆ.

