ಕೊರೊನಾ ಸೋಂಕಿತರು ಆತ್ಮ ವಿಶ್ವಾಸದಿಂದ ಚಿಕಿತ್ಸೆ ಪಡೆಯಬೇಕು – ಎಸ್.ಆನಂದ್

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಕೊರೊನಾ ಸೋಂಕಿತರು ಆತ್ಮ ವಿಶ್ವಾಸದಿಂದ ಚಿಕಿತ್ಸೆ ಪಡೆಯಬೇಕು. ಕೋವಿಡ್ ನಿಯಮಗಳಿಗೆ ಬದ್ಧರಾಗಿ ನಡೆದುಕೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ಹೇಳಿದರು.
ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮದ ಸಮೀಪ ಪ್ರಾರಂಭಿಸಲಾಗಿರುವ ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿ, ಆತಂಕದ ನಡುವೆ ಬದುಕು ಭಾರವಾಗುತ್ತದೆ. ಅದಕ್ಕೆ ಅವಕಾಶ ನೀಡಬಾರದು. ಸಮಸ್ಯೆಯನ್ನು ಧೈರ್ಯವಾಗಿ ಎದುರಿಸಬೇಕು. ಅದಕ್ಕೆ ಪೂರಕವಾದ ಎಲ್ಲ ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದರು.
ಈ ಕೇಂದ್ರದಲ್ಲಿ ಬೇರೆ ಬೇರೆ ವಯೋಮಾನದ 53 ಕೊರೊನಾ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಅಗತ್ಯವಾದ ಔಷಧ ಹಾಗೂ ಪೌಷ್ಟಿಕ ಆಹಾರ ನೀಡಲಾಗುತ್ತಿದೆ. ಮಕ್ಕಳು ಬೇಸರ ಕಳೆಯಲು ಕೋವಿಡ್ ನಿಯಮ ಪಾಲನೆಯೊಂದಿಗೆ ಅಂತ್ಯಾಕ್ಷರಿ, ಅಚ್ಚಂಕಾಯಿ ಮುಂತಾದ ಆಟಗಳನ್ನು ಆಡಿಸಲಾಗುತ್ತಿದೆ. ಇದರಿಂದ ಅವರಲ್ಲಿ ಮನೋಲ್ಲಾಸ ಉಂಟಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಸೋಂಕಿನ ಆರಂಭಿಕ ಹಂತದಲ್ಲಿ ಮುಕ್ತ ಮನಸ್ಸಿನಿಂದ ಆಸ್ಪತ್ರೆಗೆ ಹೋಗಿ ತಜ್ಞ ವೈದ್ಯರಿಂದ ಚಿಕಿತ್ಸೆ ಪಡೆದರೆ ಅದರ ತೀವ್ರತೆ ಕಡಿಮೆಯಾಗಿ, ಬೇಗ ವಾಸಿಯಾಗುತ್ತದೆ. ನಿರ್ಲಕ್ಷ್ಯ ವಹಿಸಿದರೆ ಸಮಸ್ಯೆ ಜಟಿಲವಾಗುತ್ತದೆ. ಭರವಸೆಯೇ ಬದುಕು. ಪ್ರತಿಯೊಬ್ಬರೂ ಭರವಸೆಯ ನೆರಳಲ್ಲಿ ಬದುಕು ಸಾಗಿಸಬೇಕು ಎಂದು ಹೇಳಿದರು.
ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಮೇಗೌಡ ಚಿಕಿತ್ಸಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ರೋಗಿಗಳ ಯೋಗ ಕ್ಷೇಮ ವಿಚಾರಿಸಿದರು
.