ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಅಲ್ಪ ಸಂಖ್ಯಾತರು ವಾಸಿಸುವ ಗ್ರಾಮಗಳಲ್ಲಿ ಆದ್ಯತೆ ಮೇರೆಗೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ತಾಲ್ಲೂಕಿನ ಹೆಬ್ಬಟ ಗ್ರಾಮದಲ್ಲಿ ಶುಕ್ರವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿ, ತಾಲ್ಲೂಕಿನ 43 ಗ್ರಾಮಗಳಲ್ಲಿ ಅಲ್ಪ ಸಂಖ್ಯಾತ ಸಮುದಾಯಕ್ಕೆ ಸೇರಿದ ಜನರು ವಾಸವಾಗಿದ್ದಾರೆ. ಆ ಗ್ರಾಮಗಳಿಗೆ ಅಗತ್ಯವಾದ ಮೂಲ ಸೌಕರ್ಯ ಒದಗಿಸಲಾಗಿದೆ ಎಂದು ಹೇಳಿದರು.
ಗ್ರಾಮದ ಅಲ್ಪ ಸಂಖ್ಯಾತರಿಗೆ ಅನುಕೂಲವಾಗುವಂತೆ ರೂ.25 ಲಕ್ಷ ವೆಚ್ಚದಲ್ಲಿ ಶಾದಿ ಮಹಲ್ ನಿರ್ಮಿಸಲಾಗುವುದು. ರೂ.9 ಲಕ್ಷ ವೆಚ್ಚದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಿಸಲಾಗುವುದು. ರೂ.27 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುವದು. ಗ್ರಾಮದ ಇನ್ನೊಂದು ರಸ್ತೆಯನ್ನು ರೂ.5 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ರೂ.5 ಲಕ್ಷ ವೆಚ್ಚದಲ್ಲಿ ಮಸೀದಿ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್, ಕೋಚಿಮುಲ್ ಮಾಜಿ ಅಧ್ಯಕ್ಷ ಎನ್.ಜಿ.ಬ್ಯಾಟಪ್ಪ, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಕೋಚಿಮುಲ್ ನಿರ್ದೇಶಕ ಎನ್.ಹುಮೇಶ್, ಗ್ರಾಮ ಪಂಚಾಯಿತಿ ಸದಸ್ಯ ಅನಂತಕುಮಾರ್, ಪುರಸಭಾ ಸದಸ್ಯ ನಾಗರಾಜ್, ಗೋಪಾಲರೆಡ್ಡಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶಂಕರಪ್ಪ ಇದ್ದರು.