ಕೋಲಾರ:-ಸರ್ಕಾರಿ ನೌಕರರು ಸರ್ಕಾರಿ ಕಛೇರಿಗಳಲ್ಲಿ ಹಲವಾರು ಒತ್ತಡಗಳಿಂದ ಕಾರ್ಯನಿರ್ವಹಿಸುತ್ತಿದ್ದು, ದೈಹಿಕ ಹಾಗೂ ಮಾನಸಿಕವಾಗಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸರ್ಕಾರಿ ನೌಕರರು ಕ್ರೀಡಾಕೂಟದಲ್ಲಿ ಕ್ರೀಡಾಸ್ಫೂರ್ತಿಯಿಂದ ಭಾಗವಹಿಸುವಂತಾಗಲು ಡಿಸೆಂಬರ್ ಕೊನೆವಾರ ಅಥವಾ ಜನವರಿ 2ನೇ ವಾರ ಕ್ರೀಡಾಕೂಟ ನಡೆಸಿ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಕರೆ ನೀಡಿದರು.
ಇಂದು ತಮ್ಮ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಮಂಗಳವಾರ ಸಂಜೆ ಹಮ್ಮಿಕೊಂಡಿದ್ದ, 2022-23ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾ ಕೂಟವನ್ನು ಆಯೋಜಿಸುವ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ರೀಡಾ ಕೂಟವನ್ನು ಸರ್ಕಾರಿ ನೌಕರರ ಸಂಘ ಹಾಗೂ ಯುವಜನಸೇವಾ ಮತ್ತು ಕ್ರೀಡಾ ಇಲಾಖೆ ನೇತೃತ್ವ ವಹಿಸಿ ಯಶಸ್ವಿಗೊಳಿಸಿ ಎಂದರು.
ಜಿಲ್ಲೆಯ ಪ್ರತಿಯೊಬ್ಬ ಸರ್ಕಾರಿ ನೌಕರರು ಕಡ್ಡಾಯವಾಗಿ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು. ಸ್ಪರ್ಧೆಯಲ್ಲಿ ಗೆದ್ದವರಿಗೆ ಬಹುಮಾನಗಳು,ಟೀ-ಶರ್ಟ್ ನೀಡುವ ಕುರಿತು ಜಿಪಂ ಹಾಗೂ ವಿವಿಧ ಇಲಾಖೆಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಪ್ರತಿಯೊಬ್ಬ ಸರ್ಕಾರಿ ನೌಕರರು ಈ ಕ್ರೀಡಾ ಕೂಟದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು.ಈ ಕ್ರೀಡಾಕೂಟಕ್ಕೆ ನಗರಸಭೆ, ಜಿಲ್ಲಾ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ, ಅಬಕಾರಿ ಇಲಾಖೆ, ಲೋಕೋಪಯೋಗಿ ಇಲಾಖೆ, ಸಾರಿಗೆ ಇಲಾಖೆ ಹಾಗೂ ಇತರೇ ಇಲಾಖೆಗಳು ಸಹಾ ಸಹಕಾರ ನೀಡಲು ಸೂಚಿಸಿದರು.
ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‍ಬಾಬು ಮಾತನಾಡಿ, ತಮ್ಮ ಅವಧಿಯಲ್ಲಿ ಕ್ರೀಡಾಕೂಟ ಅತ್ಯಂತ ಯಶಸ್ವಿಯಾಗಿ ನಡೆಸಲಾಗಿದೆ, ಕಳೆದ ಬಾರಿ ಕ್ರೀಡಾಕೂಟದಲ್ಲಿ ಎರಡು ದಿನಗಳು ಸೇರಿದಂತೆ ಸುಮಾರು 5 ಸಾವಿರ ಮಂದಿ ಪಾಲ್ಗೊಂಡಿದ್ದು, ಈ ಬಾರಿ ಮತ್ತಷ್ಟು ಅದ್ದೂರಿಯಾಗಿ ಕಾರ್ಯಕ್ರಮ ಆಯೋಜಿಸುವುದಾಗಿ ತಿಳಿಸಿದರು.
ಕ್ರೀಡಾಕೂಟ ಯಶಸ್ವಿಯಾಗಲು ಜಿಲ್ಲಾಡಳಿತ ಹಾಗೂ ಜಿಪಂ ವ್ಯಾಪ್ತಿಯ ಎಲ್ಲಾ ಇಲಾಖೆಗಳ ಸಹಕಾರ ನೀಡುವ ಕುರಿತು ಕ್ರಮವಹಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಪರವಾಗಿ ಆಗಮಿಸಿದ್ದ ಸಹಾಯಕ ಕಾರ್ಯದರ್ಶಿಗಳನ್ನು ಅವರು ಕೋರಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಶಶಿಕಲಾ ಮಾತನಾಡಿ, ಸ್ಪರ್ಧೆಯಲ್ಲಿ ಗೆದ್ದವರಿಗೆ ಪ್ರಥಮ ಮತ್ತು ದ್ವಿತೀಯ ಬಹುಮಾನ ಹಾಗೂ ಆಕರ್ಷಕ ಟ್ರೋಫಿ ನೀಡಲಾಗುತ್ತದೆ. ನಂತರ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳನ್ನು ರಾಜ್ಯ ಮಟ್ಟಕ್ಕೆ ಕಳುಹಿಸಲಾಗುವುದು. ಸಾಂಸ್ಕøತಿಕ ಕಾರ್ಯಕ್ರಮಗಳು ಸಹ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಆಹಾರ ಇಲಾಖೆ ಉಪನಿರ್ದೇಶಕಿ ಶೃತಿ, ಯುವಜನಸೇವಾ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ, ಕನ್ನಡ ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸರೆಡ್ಡಿ, ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಮಂಜುನಾಥ್, ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಚೌಡಪ್ಪ, ಖಜಾಂಚಿ ಕೆ.ವಿಜಯ್, ಕಾರ್ಯಾಧ್ಯಕ್ಷ ಎನ್.ಶ್ರೀನಿವಾಸರೆಡ್ಡಿ, ಉಪಾಧ್ಯಕ್ಷ ಅಜಯ್ ಕುಮಾರ್, ನೌಕರರ ಕ್ರೀಡಾ ಸಾಂಸ್ಕøತಿಕ ಸಂಘದ ಅಧ್ಯಕ್ಷ ಎಂ.ನಾಗರಾಜ್, ಕಾರ್ಯದರ್ಶಿ ಇಂಚರ ನಾರಾಯಣಸ್ವಾಮಿ, ಪದಾಧಿಕಾರಿಗಳಾದ ಪ್ರೇಮಾ, ಪರಮೇಶ್,ವಿಷಯಪರಿವೀಕ್ಷಕ ಶಂಕರೇಗೌಡ,ಸರ್ವೇ ಇಲಾಖೆಯ ವಿಜಯ್ ಮತ್ತಿತರರು ಉಪಸ್ಥಿತರಿದ್ದರು.